ಸರ್ಕಾರ ಹಲವು ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿದೆ. ಆದರೆ, ಕೆಲ ಅಧಿಕಾರಿಗಳ ನಿರ್ಲಕ್ಷ ಮತ್ತು ವಿಳಂಬ ಧೋರಣೆಯಿಂದ ಸ್ಥಳೀಯ ಸಾರ್ವಜನಿಕರು ದಿನ ನಿತ್ಯ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ತಾಲೂಕು ಕಚೇರಿಗೆ ಅಲೆ ದಾಡುವ ಪರಿಸ್ಥಿತಿ ಬಂದೊದಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಜನರಿಗೆ ಸರ್ಕಾರಿ ಸೇವೆಗಳು ಸುಲಭ, ತ್ವರಿತವಾಗಿ ತಲುಪಿಸಲು ಮುಂದಾಗಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಗ್ರಾಪಂ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರದ ವಿವಿಧ ಸೇವೆಗಳು ಸಾರ್ವಜನಿಕರಿಗೆ ಸುಲಭ ಮತ್ತು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಜನರ ಸಮಸ್ಯೆಗೆ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಥಮ ಆದ್ಯತೆ ನೀಡಬೇಕೆಂದು ಸೂಚಿಸಿದರು.
ಸರ್ಕಾರ ಹಲವು ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿದೆ. ಆದರೆ, ಕೆಲ ಅಧಿಕಾರಿಗಳ ನಿರ್ಲಕ್ಷ ಮತ್ತು ವಿಳಂಬ ಧೋರಣೆಯಿಂದ ಸ್ಥಳೀಯ ಸಾರ್ವಜನಿಕರು ದಿನ ನಿತ್ಯ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ತಾಲೂಕು ಕಚೇರಿಗೆ ಅಲೆ ದಾಡುವ ಪರಿಸ್ಥಿತಿ ಬಂದೊದಗಿದೆ. ಇಂತಹ ಪರಿಸ್ಥಿತಿಗಳು ಮತ್ತೆ ಮರುಕಳಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದರು.ಜನರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆ ಒದಗಿಸಬೇಕು. ಜನರ ಕೆಲಸ ವಿಳಂಬ ಮಾಡದೆ ತ್ವರಿತವಾಗಿ ನಿರ್ವಹಿಸಬೇಕು. ಜನರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆ ಹಾಗೂ ಅಹವಾಲು ಆಲಿಸಿ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು.ಈ ವೇಳೆ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ತಾಪಂ ಇಒ ರಾಮಲಿಂಗಯ್ಯ, ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಣ್ ಕುಮಾರ್, ತಾಲೂಕು ಆಡಳಿತ ಅಧಿಕಾರಿ ಎಸ್.ರವಿಶಂಕರ್, ಅರಣ್ಯ ಇಲಾಖೆ ಅಧಿಕಾರಿ ಗಂಗಾಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮದ ಸುನಿಲ್ ಗೌಡ, ಗ್ರಾಮಸ್ಥರು ಉಪಸ್ಥಿತರಿದ್ದರು.