ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಿ: ಮಂಜುನಾಥ್ ಗೌಡ

| Published : Jul 06 2025, 01:52 AM IST

ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಿ: ಮಂಜುನಾಥ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಜನಪರ ಯೋಜನೆ ಮನೆಮನೆಗೆ ತಲುಪಿಸಬೇಕು.

ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಕಾಂಗ್ರೆಸ್ ಯುವ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಕ್ಷವನ್ನು ಮತ್ತಷ್ಟೂ ಬಲಿಷ್ಠಗೊಳಿಸಿ ಯುವಶಕ್ತಿಯನ್ನು ಸಾಬೀತುಪಡಿಸಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯ ಉಸ್ತುವಾರಿ ನಿಗಮ್ ಬಂಡಾರಿ ಅವರೊಂದಿಗೆ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಪಕ್ಷದ ಸಿದ್ಧಾಂತ ಹಾಗೂ ತಾತ್ವಿಕತೆಯನ್ನು ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೊಳಿಸಿರುವ ಅನೇಕ ಜನಪರ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ದುಡಿಮೆಯೇ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಯಾರೂ ಕೂಡ ಒಂದು ಸ್ಥಾನದಲ್ಲಿ ಶಾಶ್ವತವಾಗಿ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ನಿಮ್ಮ ದುಡಿಮೆ ಮತ್ತು ಶ್ರಮ ನಿಮ್ಮನ್ನು ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುತ್ತದೆ. ಕೆಲಸವನ್ನು ನಿಷ್ಠೆಯಿಂದ ಮಾಡಿದರೆ ತಲುಪುವ ಜಾಗ ದೊಡ್ಡದಾಗಿರುತ್ತದೆ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ನಾನಾ ರೀತಿಯ ಷಡ್ಯಂತ್ರಗಳ ಮೂಲಕ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಹುನ್ನಾರ ನಡೆಸಿದೆ. ಇಡಿ ಮತ್ತು ಐಟಿಯಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್‌ನ ಸಂಸದರು, ಶಾಸಕರು ಮತ್ತು ಪಕ್ಷದ ನಿಷ್ಠಾವಂತರಿಗೆ ತೊಂದರೆ ನೀಡಲಾಗುತ್ತಿದೆ. ಕೇಂದ್ರದ ಬಿಜೆಪಿ ನಡೆಸುವ ಅನ್ಯಾಯದ ವಿರುದ್ಧ ಪ್ರತಿಭಟಿಸಬೇಕು. ಪಕ್ಷ ಸಂಘಟನೆಯ ಜೊತೆಗೆ ಕೇಂದ್ರ ಸರ್ಕಾರ ಮಾಡುವ ಅನ್ಯಾಯ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆದಿಲ್ ನಜಿರ್, ರಾಹುಲ್ ಜಾರಕಿಹೊಳಿ, ಮಾಧ್ಯಮ ವಿಭಾಗದ ಮುಖ್ಯಸ್ಥ ದೀಪಕ್ ಗೌಡ, ರಾಜ್ಯ ಕಾರ್ಯದರ್ಶಿ ಆಕಾಶ್ ಕೊನೇರಿ, ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಏಕಾಂಬ್ರಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮತ್ತು ಮಾಜಿ ಅಧ್ಯಕ್ಷ ಸಿದ್ದು ಹಳ್ಳೇಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.