ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ

| Published : Sep 14 2024, 01:46 AM IST

ಸಾರಾಂಶ

ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಲಾಭ ದೊರಕಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು

ಕನ್ನಡಪ್ರಭ ವಾರ್ತೆ ರಾಯಚೂರು

ಮಹಿಳಾ ಸಬಲೀಕರಣ ಮತ್ತು ಯುವ ಜನಾಂಗದ ಶ್ರೇಯೋಭಿವೃದ್ದಿಗಾಗಿ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಲಾಭ ದೊರಕಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳು ಅನುಷ್ಟಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷ ಎಸ್.ಆರ್ ಮಹರೋಜ್ ಖಾನ್ ಸೂಚಿಸಿದರು.

ಸ್ಥಳೀಯ ಜಿಪಂ ನಿರ್ಮಲ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳು ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮೀ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಅಭಿನಂದಿಸಿದ ಅವರು ಯುವನಿಧಿ ಯೋಜನೆ ಅಡಿಯ ಕೆಲವು ತೊಡಕುಗಳನ್ನು ನಿವಾರಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಉಪಾಧ್ಯಕ್ಷ ನಾಗೇಂದ್ರ, ಅಪರ ಜಿಲ್ಲಾಧಿಕಾರಿಗ ಶಿವಾನಂದ, ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣ, ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಇದ್ದರು.

ಫಲಾನುಭವಿಗಳೊಂದಿಗೆ ಸಂವಾದ

ಇದೇ ವೇಳೆ ರಾಯಚೂರಿನ ಜಿಪಂ ಕಚೇರಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಫಲಾನುಭವಿಗಳೊಂದಿಗೆ ಎಸ್.ಆರ್ ಮಹರೋಜ್ ಖಾನ್ ಅವರು ಸಂವಾದ ನಡೆಸಿದರು. ಈ ವೇಳೆ ಮಾತನಾಡಿ, ರಾಜ್ಯ ಸರಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಬೇಕು ಇಷ್ಟೇ ಅಲ್ಲದೇ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.