ಸಾರಾಂಶ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅನುಮತಿ ಪಡೆಯದೆ ರೆಸಾರ್ಟ್ ಮತ್ತು ಹೋಂ ಸ್ಟೇ ನಿರ್ಮಾಣ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಸುಲಭವಾಗಿ ಹಣ ಮಾಡುವ ಉದ್ದೇಶದಿಂದ ಯಾವುದೇ ಅನುಮತಿ ಪಡೆಯದೆ ರೆಸಾರ್ಟ್ ಮತ್ತು ಹೋಂ ಸ್ಟೇ ನಿರ್ಮಾಣ ಮಾಡಲಾಗುತ್ತಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುಡ್ಡಗಾಡು ಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿನ ಮನೆಗಳನ್ನು ಹೋಂ ಸ್ಟೇ ರೀತಿಯಲ್ಲಿ ಪರಿವರ್ತಿಸಲಾಗಿದೆ. ಇಲ್ಲಿ ಯಾವುದೇ ಸೌಕರ್ಯ ಇಲ್ಲದಿದ್ದರೂ ಒಂದೊಂದು ಕೊಠಡಿಯಲ್ಲಿ ನೂರಾರು ಜನರ ವಾಸ್ತವ್ಯಕ್ಕೆ ಅವಕಾಶ ಮಾಡಲಾಗುತ್ತಿದೆ. ಇದೇ ರೀತಿ ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂ ಸ್ಟೇ ಮತ್ತು ರೆಸಾರ್ಟ್ ನಿರ್ಮಾಣವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಲ್ಲಿಯೂ ಭೂ ಕುಸಿತ ಪ್ರಕರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.ಅಕ್ರಮ ರೆಸಾರ್ಟ್ ಮತ್ತು ಹೋಂ ಸ್ಟೇ ಗಳಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಇಲ್ಲಿ ಕೆಲಸ ಮಾಡುವ ಕೆಲಸಗಾರರು ಬಾಂಗ್ಲಾದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶದ ಮೂಲದವರಾಗಿದ್ದಾರೆ. ಹೀಗಾಗಿ ಮಲೆನಾಡಿಗರು ಆತಂಕದಲ್ಲಿಯೇ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್, ಯುವ ಘಟಕದ ಜಿಲ್ಲಾಧ್ಯಕ್ಷ ಸುಮಂತ್, ಆಟೋ ಘಟಕದ ಅಧ್ಯಕ್ಷ ಸುನಿಲ್ ಕುಮಾರ್, ಕಾರ್ಯದರ್ಶಿ ಪ್ರಕಾಶ್, ಪ್ರಮುಖರಾದ ಈಶ್ವರ್, ಅಶ್ವತ್, ನಟರಾಜ್, ಶಿವರಾಜ್ ಹಾಗೂ ಕಾರ್ಯಕರ್ತರು ಇದ್ದರು. 1 ಕೆಸಿಕೆಎಂ 4ಜಿಲ್ಲೆಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.