ಶಾಸಕ ಚೆನ್ನಾರಡ್ಡಿ ಪಾಟೀಲ್ ವಿರುದ್ಧ ಕ್ರಮಕ್ಕೆ ಒತ್ತಾಯ

| Published : Aug 06 2024, 12:31 AM IST

ಸಾರಾಂಶ

ಸುರಪುರ: ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪನಗೌಡ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಪಿಎಸ್‌ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ತಹಸೀಲ್ದಾರ್ ಮುಖಾಂತರ ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸುರಪುರಸುರಪುರ: ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪನಗೌಡ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಪಿಎಸ್‌ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ತಹಸೀಲ್ದಾರ್ ಮುಖಾಂತರ ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಯಾದಗಿರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಸುಮಾರು ಏಳು ತಿಂಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದೇ ಸ್ಥಳದಲ್ಲಿ ಮುಂದುವರಿಯಬೇಕಾದರೆ 30 ಲಕ್ಷ ರು.ಗಳು ನೀಡುವಂತೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪನಗೌಡ ಬೇಡಿಕೆ ಇಟ್ಟಿದ್ದಾರೆ.

ಇದರಿಂದ ಹಣ ಹೊಂದಿಸಲು ಸಾಧ್ಯವಾಗದೇ ಅತೀವ ಒತ್ತಡಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪರಶುರಾಮ ಪತ್ನಿಗೆ ಸರ್ಕಾರಿ ನೌಕರಿ ಹಾಗೂ 5 ಕೋಟಿ ರು.ಗಳ ಪರಿಹಾರ ಒದಗಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯದಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘಟನೆಯ ಶಿವಲಿಂಗ ಹಸನಾಪುರ, ಚನ್ನಬಸಪ್ಪ ತಳವಾರ, ತಿಪ್ಪಣ್ಣ ಶೆಳ್ಳಗಿ, ಶೇಖರ ಮಂಗಳೂರು, ಹಣಮಂತ ರತ್ತಾಳ, ಎಂ. ಪಟೇಲ, ಖಾಜಾ ಅಜ್ಮೀರ್, ಹಣಮಂತ ದೇವಾಪುರ ಸೇರಿದಂತೆ ಇತರರಿದ್ದರು.