ಸಾರಾಂಶ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾದಾಪುರದಲ್ಲಿ 8ನೇ ಮಾನವ ಸರಪಳಿ ಜಾಗೃತಿ ಕಾರ್ಯಕ್ರಮ ನಡೆಸಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾದಾಪುರದಲ್ಲಿ 8ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವಲ್ಯಾಂಡ್‌ಗೆ ಮಾರಕವಾಗಿರುವ ಭೂಪರಿವರ್ತನೆಯನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು.ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯ ಹಕ್ಕು ಮತ್ತು ಎಸ್‌ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆನ್ನುವ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ವಿವಿಧಡೆ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಂ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್‌ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಂ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ ‘ಸಂಘ’ ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆ್ಯನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದು ತಿಳಿಸಿದರು. ಮಾನವ ಸರಪಳಿ ಕಾರ್ಯಕ್ರಮವು ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಶಾಂತಿಯುತವಾಗಿ ಕೊಡವಲ್ಯಾಂಡ್ ನಾದ್ಯಂತ ನಡೆಯುತ್ತಿದೆ. ಬದಿಗೇರಿ ನಾಡ್, ಸೂರ್ಲಬ್ಬಿ ನಾಡ್, ಗಡಿನಾಡ್, ಪಾಲೇರಿನಾಡ್ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದರಿಂದ ಸಿಎನ್‌ಸಿಯ ಹೋರಾಟದ ಬಲ ಮತ್ತಷ್ಟು ಹೆಚ್ಚಿದೆ ಎಂದು ಎನ್.ಯು.ನಾಚಪ್ಪ ಹೇಳಿದರು. ಆ.10ರಂದು ಬೆಳಗ್ಗೆ 10.30 ಗಂಟೆಗೆ ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು.ನಾಪಂಡ ರಮ್ಯ ಚಂಗಪ್ಪ, ಪಾಸುರ ರಜಿನಿ, ನಾಪಂಡ ಶೈಲಾ, ಮೇದೂರ ಪ್ರತೀಕ, ನಾಗಂಡ ರೇಣು, ಕುಟ್ಟಂಡ ಗೊಂಬೆ, ತಂಬುಕುತ್ತೀರ ಜಾಜಿ, ತಂಬುಕುತ್ತೀರ ರೇಖಾ, ಉದ್ದಿನಾಡಂಡ ಪೊನ್ನಮ್ಮ, ಮಂಡೀರ ನೀಲಮ್ಮ, ಬಾಳೆಯಡ ಪೊನ್ನಮ್ಮ, ಮೇದೂರ ಕಂಠಿ, ಬಾಚಿನಾಡಂಡ ಗಿರಿ, ಹಂಚೇಟಿರ ಮನು, ಮುದ್ದಂಡ ಮಧು, ಮೇದೂರ ದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು.