ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ-25 ಅನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಐದು ಸಲ ಭೇಟಿ ಮಾಡಿ, ಕೇಂದ್ರ ಸರ್ಕಾರಕ್ಕೆ ನಿರಂತರ ಮನವಿ ಸಲ್ಲಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.

- ಕೇಂದ್ರ ಸರ್ಕಾರ ಸದ್ಯಕ್ಕೆ ಇಲ್ಲವೆಂದರೂ ನಮ್ಮ ಪ್ರಯತ್ನ, ಒತ್ತಡ ಹೇರೋದು ನಿಲ್ಲಿಸಿಲ್ಲ: ಸಂಸದೆ ಡಾ.ಪ್ರಭಾ ಹೇಳಿಕೆ- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ-25 ಅನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಐದು ಸಲ ಭೇಟಿ ಮಾಡಿ, ಕೇಂದ್ರ ಸರ್ಕಾರಕ್ಕೆ ನಿರಂತರ ಮನವಿ ಸಲ್ಲಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.

ಹರಪನಹಳ್ಳಿ ತಾ. ದುಗ್ಗಾವತಿ ಗ್ರಾಮದಲ್ಲಿ ಸೋಮವಾರ 2024-25ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿಎಂಎಫ್‌) ಯೋಜನೆಯ 8ನೇ ಹಂತದಡಿ ₹3 ಕೋಟಿ ಅನುದಾನದಲ್ಲಿ ಕೈಗೊಳ್ಳಲಿರುವ ಹೊಸಪೇಟೆ- ಶಿವಮೊಗ್ಗ ರಾಜ್ಯ ಹೆದ್ದಾರಿ-25ರ ರಸ್ತೆ ಅಭವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ್ದೇನೆ ಎಂದರು.

ಪ್ರಮುಖ ಸಂಪರ್ಕ ರಸ್ತೆಯಾದ ಈ ರಾಜ್ಯ ಹೆದ್ದಾರಿ ನಿತ್ಯ ಸಾವಿರಾರು ವಾಹನ, ಲಕ್ಷಾಂತರ ಜನ ಸಂಚಾರಕ್ಕೆ ಆದರವಾಗಿದೆ. ಇದನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವುದರಿಂದ ಸಾರಿಗೆ ವ್ಯವಸ್ಥೆ ಸುಧಾರಿಸುವ ಜೊತೆಗೆ ವ್ಯಾಪಾರ, ವಾಣಿಜ್ಯ, ಗ್ರಾಮೀಣ ಆರ್ಥಿಕ ಚಟುವಟಿಕೆಗೂ ಅನುಕೂಲವಾಗುತ್ತದೆ. ಹೊಸ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಹಾಗೂ ರಾಜ್ಯ ಹೆದ್ದಾರಿಗಳ ಮೇಲ್ದರ್ಜೆಗೇರಿಸುವ ಪ್ರಸ್ತಾವ ಸದ್ಯಕ್ಕೆ ಪರಿಗಣಿಸುತ್ತಿಲ್ಲ ಎಂದು ಕೇಂದ್ರ ಹೇಳಿದೆ. ಆದರೂ, ನಮ್ಮ ಪ್ರಯತ್ನ ನಿಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಂಸದರಾದ ಇ.ತುಕಾರಾಂ, ಬಿ.ವೈ. ರಾಘವೇಂದ್ರ ಜೊತೆ ಪ್ರಧಾನಿ ಕಚೇರಿಗೂ ಪತ್ರ ಬರೆದು, ಈ ಭಾಗದ ಹೆದ್ದಾರಿ ಅಭಿವೃದ್ಧಿ ಅಗತ್ಯ ಮನವರಿಕೆ ಮಾಡಿಕೊಡಲು ಸಮಯ ಕೋರಿದ್ದೇವೆ. ನೂತನ ವಿಜಯ ನಗರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಉತ್ತೇಜಿಸಲು ಪ್ರತ್ಯೇಕ ಕೃಷಿ ವಿಜ್ಞಾನ ಕೇಂದ್ರ ಸ್ಥಾಪಿಸಲು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ ಅವರನ್ನು 2 ಸಲ ಭೇಟಿ ಮಾಡಿದ್ದೇವೆ. ಕೃಷಿ ತಂತ್ರಜ್ಞಾನ, ವೈಜ್ಞಾನಿಕ ಬೆಳೆ ಪದ್ಧತಿ ಹಾಗೂ ಆಧುನಿಕ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸಲು ಕೃಷಿ ವಿಜ್ಞಾನ ಕೇಂದ್ರ ಇಲ್ಲಿ ಅಗತ್ಯವಾಗಿದೆ ಎಂದು ಹೇಳಿದರು.

ಹರಿಹರ– ಕೊಟ್ಟೂರು ಮಾರ್ಗದಲ್ಲಿ ಸಂಚರಿಸುತ್ತಿರುವ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (ಡೆಮು) ರೈಲಿನಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಪ್ರಯಾಣಿಕರಿಂದ ಬೇಡಿಕೆ ಬಂದಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಸಂಬಂಧಿಸಿದ ರೈಲ್ವೆ ಅಧಿಕಾರಿಗಳ ಗಮನಕ್ಕೆ ಈ ವಿಷಯ ತರಲಾಗಿದೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದ್ದೇವೆ. ಅಜ್ಮೀರ್–ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹರಪನಹಳ್ಳಿಯಲ್ಲಿ ನಿಲುಗಡೆ ಕಲ್ಪಿಸುವ ಬೇಡಿಕೆಯನ್ನೂ ರೈಲ್ವೆ ಇಲಾಖೆ ಮುಂದಿಡಲಾಗಿದೆ. ಗ್ರಾಮೀಣ ಜನರಿಗೆ ಉತ್ತಮ ರೈಲ್ವೆ ಸಂಪರ್ಕ ಒದಗಿಸುವುದು ನಮ್ಮ ಆದ್ಯತೆ ಎಂದು ತಿಳಿಸಿದರು.

ಹರಪನಹಳ್ಳಿ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜಿಲ್ಲಾ ಖನಿಜ ನಿಧಿಯಡಿ ಒಟ್ಟು ₹55 ಕೋಟಿ ಮೊತ್ತದ ಕಾಮಗಾರಿಗೆ ಮಂಜೂರಾತಿ ಸಿಕ್ಕಿದ್ದು, ಈಗಾಗಲೇ ಸುಮಾರು ₹25 ಕೋಟಿ ಮೊತ್ತದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ರಸ್ತೆ, ಚರಂಡಿ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಿದ್ದೇವೆ. ಜನಪ್ರತಿನಿಧಿ, ಅಧಿಕಾರಿಗಳು, ಸ್ಥಳೀಯರು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಅಭಿವೃದ್ಧಿ ಕಾರ್ಯ ಪರಿಣಾಮಕಾರಿಯಾಗಿ ಅನುಷ್ಠಾನ ಸಾಧ್ಯ. ಈ ನಿಟ್ಟಿನಲ್ಲಿ ಶಾಸಕರಾದ ಲತಾ ಮಲ್ಲಿಕಾರ್ಜುನ, ಸ್ಥಳೀಯ ಮುಖಂಡರು ಅಭಿವೃದ್ಧಿ ಕಾಮಗಾರಿಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಶ್ಲಾಘಿಸಿದರು.

ಹರಪನಹಳ್ಳಿ ಕ್ಷೇತ್ರ ಶಾಸಕಿ ಲತಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಜಿನಪ್ಪ, ಮುಖಂಡರಾದ ಕರೆಗೌಡ ನಿಂಗಪ್ಪ, ರಾಟಿ ದಾದಾಪೀರ್, ಉದಯಶಂಕರ ಸೇರಿದಂತೆ ದುಗ್ಗಾವತಿ ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಇದ್ದರು.

- - -

(ಬಾಕ್ಸ್‌)

* ಅನುದಾನ ತರುವುದಷ್ಟೇ ಸಂಸದರ ಜವಾಬ್ದಾರಿಯಲ್ಲ

- ಕೇಂದ್ರದ ನೀತಿ ನಿರೂಪಣೆ, ಜನರ ಸಮಸ್ಯೆ ಬಗ್ಗೆ ಸಂಸತ್ತಲ್ಲಿ ಪ್ರಸ್ತಾಪ: ಡಾ.ಪ್ರಭಾ

ದಾವಣಗೆರೆ: ಸಂಸದರ ಜವಾಬ್ದಾರಿ ಕೇವಲ ಅನುದಾನ ತರುವುದಕ್ಕಷ್ಟೇ ಸೀಮಿತವಾಗದೇ, ಕೇಂದ್ರ ಸರ್ಕಾರದ ನೀತಿ ನಿರೂಪಣೆಯಲ್ಲಿ ಭಾಗವಹಿಸುವುದು, ಜನಸಾಮಾನ್ಯರ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸುವುದು, ಸಾರ್ವಜನಿಕ ಹಿತಾಸಕ್ತಿ ಕಾಪಾಡುವುದು ಪ್ರಮುಖ ಕರ್ತವ್ಯವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಹರಪನಹಳ್ಳಿ ತಾ. ದುಗ್ಗಾವತಿ ಗ್ರಾಮದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿಎಂಎಫ್‌) ಯೋಜನೆಯ 8ನೇ ಹಂತದಡಿ ₹3 ಕೋಟಿ ಅನುದಾನದ ಹೊಸಪೇಟೆ- ಶಿವಮೊಗ್ಗ ರಾಜ್ಯ ಹೆದ್ದಾರಿ-25ರ ರಸ್ತೆ ಅಭವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ನಿಗದಿತ ಮಾನದಂಡಕ್ಕೆ ಅನುಗುಣವಾಗಿ ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದರು.

ಇಂಧನ ಗುಣಮಟ್ಟದಲ್ಲಿ ಏಕರೂಪತೆ ಕಾಪಾಡುವ ಜೊತೆಗೆ ವಾಹನಗಳ ಕಾರ್ಯಕ್ಷಮತೆ ಮತ್ತು ಗ್ರಾಹಕರ ಹಿತಾಸಕ್ತಿಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂಬ ವಿಷಯ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳು, ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆ, ಚುನಾವಣಾ ವ್ಯವಸ್ಥೆ ಪಾರದರ್ಶಕತೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಮಹಿಳಾ ಮೀಸಲಾತಿ ಕಾಯ್ದೆ ಅನುಷ್ಠಾನ ಹಾಗೂ ಕ್ಷೇತ್ರ ಮರುವಿಂಗಡಣೆ ಕುರಿತು ಸ್ಪಷ್ಟತೆ ಅಗತ್ಯವಿದೆ. ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಪ್ರಸ್ತಾವದ ವೇಳೆ ರಾಜ್ಯಗಳ ಪ್ರಾತಿನಿಧ್ಯಕ್ಕೆ ಯಾವುದೇ ಅನ್ಯಾಯ ಆಗದಂತೆ ಎಚ್ಚರ ವಹಿಸಬೇಕು. ಅಭಿವೃದ್ಧಿ ಕಾರ್ಯಗಳ ಜೊತೆಗೆ ಜನರ ಹಕ್ಕುಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ನಿರಂತರ ಧ್ವನಿ ಎತ್ತಲಾಗುವುದು. ತಮ್ಮ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದು ಸಂಸದೆ ಡಾ.ಪ್ರಭಾ ಭರವಸೆ ನೀಡಿದರು.

- - -

-23ಕೆಡಿವಿಜಿ1:

ದುಗ್ಗಾವತಿಯಲ್ಲಿ 2024-25ನೇ ಸಾಲಿನ ಡಿಎಂಎಫ್‌ ಯೋಜನೆಯ 8ನೇ ಹಂತದಡಿ ₹3 ಕೋಟಿ ಅನುದಾನದ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ-25ರ ರಸ್ತೆ ಅಭವೃದ್ಧಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೂಮಿಪೂಜೆ ನೆರವೇರಿಸಿದರು. ಹರಪನಹಳ್ಳಿ ಕ್ಷೇತ್ರ ಶಾಸಕರಾದ ಲತಾ ಮಲ್ಲಿಕಾರ್ಜುನ ಇತರರು ಇದ್ದರು.