ಮಹಾರಾಷ್ಟ್ರ ಗೀತೆ ಹಾಕಿದವರ ವಿರುದ್ಧ ಕ್ರಮಕ್ಕೆ ಆಗ್ರಹ

| Published : Sep 09 2025, 01:01 AM IST

ಮಹಾರಾಷ್ಟ್ರ ಗೀತೆ ಹಾಕಿದವರ ವಿರುದ್ಧ ಕ್ರಮಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಎಂಇಎಸ್‌ನ ಕೆಲ ಕಿಡಿಗೇಡಿಗಳು ಮಾಡುವ ದುಷ್ಕೃತ್ಯದಿಂದಾಗಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಗಣೇಶ ವಿಗ್ರಹಗಳ ವಿಸರ್ಜನಾ ಮೆರವಣಿಗೆ ವೇಳೆ ಮಹಾರಾಷ್ಟ್ರ ಗೀತೆಗಳನ್ನು ಹಾಕಿದ ಎಂಇಎಸ್ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು, ಪದೇ ಪದೇ ಭಾಷಾ ವಿಚಾರದಲ್ಲಿ ಕ್ಯಾತೆ ತೆಗೆಯುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ನಗರದಲ್ಲಿ ಭಾನುವಾರ ನಡೆದ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯದ ಗೀತೆಗಳನ್ನು ಹಾಕುವ ಮೂಲಕ ಮತ್ತೆ ಇಲ್ಲಿನ ಕೆಲ ನಾಡ ದ್ರೋಹಿಗಳು ಉದ್ದಟತನ ಪ್ರದರ್ಶಿಸಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯವರು ತಮ್ಮ ಅಸ್ತಿತ್ವ ಕಳೆದುಕೊಂಡಿದ್ದಾರೆ.‌ ಹೀಗಾಗಿ ಪದೇ ಪದೇ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ಶಾಂತಿ ಕದಡುವ ಕೆಲಸಕ್ಕೆ ಮುಂದಾಗುತ್ತಿದ್ದಾರೆ. ಪೊಲೀಸ್ ಇಲಾಖೆ ಇದಕ್ಕೆ ಅವಕಾಶ ಕಲ್ಪಿಸಬಾರದು. ಮತ್ತೆ ಇಂತಹ ಪ್ರಕರಣ ಮರುಕಳಿಸದಂತೆ ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು‌ ಒತ್ತಾಯಿಸಿದರು.

ಬೆಳಗಾವಿಯಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಬಹಳಷ್ಟು ಸೌಹಾರ್ದತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಈ ನಡುವೆ ಎಂಇಎಸ್‌ನ ಕೆಲ ಕಿಡಿಗೇಡಿಗಳು ಮಾಡುವ ದುಷ್ಕೃತ್ಯದಿಂದಾಗಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಕೇವಲ ಕೃತ್ಯ ಎಸಗಿದವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳದೆ ಅವರ ಹಿಂದಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಸುರೇಶ ಗವನ್ನವರ ಸೇರಿ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.