ಸಾರಾಂಶ
ಶಹಾಪುರದಲ್ಲಿ ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ಕುಟುಂಬಕ್ಕೆ ರಕ್ಷಣೆ ನೀಡುವುದರ ಜತೆಗೆ ಅವಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಶಹಾಪುರ
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ತಾಲೂಕು ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಉಮಾಕಾಂತ ಹಳ್ಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರುಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಮಿತಿಯ ಮುಖಂಡ ವೆಂಕಟೇಶ್ ಬೋನೆರ್ ಮಾತನಾಡಿ, ಅಂಜಲಿ ತಂದೆ ತಾಯಿಯನ್ನು ಕಳೆದುಕೊಂಡ ಯುವತಿ. ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಳು. ಅವಳಿಗೆ ಇಬ್ಬರು ಸಹೋದರಿಯರಿದ್ದು, ಅವಳನ್ನ ಕಳೆದುಕೊಂಡ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕುಟುಂಬಕ್ಕೆ ರಕ್ಷಣೆ ನೀಡುವುದರ ಜತೆಗೆ ಅವಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಇಂತಹ ಘಟನೆಗಳು ಹೆಚ್ಚು ಹೆಚ್ಚು ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಮುಖ್ಯಸ್ಥರ ರಾಯಪ್ಪ ಸಾಲಿಮನಿ ಮಾತನಾಡಿ, ಅಂಜಲಿಗೆ ಕೊಲೆ ಬೆದರಿಕೆ ಹಾಕಿದ ಕುರಿತು ಪೊಲೀಸರಿಗೆ ಮೌಖಿಕವಾಗಿ ದೂರು ನೀಡಲಾಗಿತ್ತು. ಅವರು ನಿರ್ಲಕ್ಷ್ಯ ತೋರಿದ್ದರಿಂದ ಹತ್ಯೆಯಾಯಿತು. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾದ ಸಂದರ್ಭವೇ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದರೆ, ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ ಎಂದು ಆರೋಪಿಸಿದರು.ಭೀಮರಾಯ ಕೊಲ್ಕರ್, ರೇವಣಸಿದ್ದಯ್ಯ, ಸಚಿನ್ ನಾಶಿ, ಭೀಮಣ್ಣ ಶಖಾಪುರ, ಬಸ್ಸು ರತ್ತಾಳ, ಮೌನೇಶ್ ಹಳಿಸಗರ್, ಹಣಮಂತ ರಾಯಗೌಡ, ಭೀಮರಾಯ, ಭೀಮ ನಾಯ್ಕೋಡಿ, ಭೀಮಣ್ಣ ತಹಸೀಲ್ದಾರ್, ರಾಮಣ್ಣ ನೈಕೋಡಿ, ಸೋಮುಗೌಡ ಕಟ್ಟಿಮನಿ ಸೇರಿದಂತೆ ಇತರರಿದ್ದರು.