ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಸೆ. 16ರಂದು ಪಟ್ಟಣದಲ್ಲಿ 5 ಸಾವಿರ ರೈತರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಒಳಗೊಂಡು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಕುಷ್ಟಗಿ: ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಸೆ. 16ರಂದು ಪಟ್ಟಣದಲ್ಲಿ 5 ಸಾವಿರ ರೈತರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಒಳಗೊಂಡು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ಬಿಜೆಪಿ ಅಂಜನಾದ್ರಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವೀರಯೋಧ ಮಲ್ಲಯ್ಯ ವೃತ್ತದಿಂದ ಪ್ರತಿಭಟನೆ ಆರಂಭವಾಗಿ ಬಸವೇಶ್ವರ ವೃತ್ತದ ಮಾರ್ಗವಾಗಿ ತಹಸೀಲ್ದಾರ್ ಕಾರ್ಯಾಲಯದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಸವೇಶ್ವರ ವೃತ್ತದಲ್ಲಿ ಸುಮಾರು ಎರಡು ತಾಸು ರಸ್ತೆ ಬಂದ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.ತಾಲೂಕಿನ ವಿವಿಧ ಗ್ರಾಮಗಳ ರೈತರೊಂದಿಗೆ ಸಭೆ ನಡೆಸಿ ಪ್ರತಿಭಟನೆ ಕುರಿತು ಚರ್ಚಿಸಲಾಗಿದೆ. ರೈತರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಸುಮಾರು 5 ಸಾವಿರ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕುಷ್ಟಗಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಷ್ಟಗಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.ರೈತರ ಸಂಕಷ್ಟಕ್ಕೆ ಸ್ಪಂದಿಸಿ ಕೂಡಲೇ ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ಬರಪೀಡಿತ ಪ್ರದೇಶಗಳಿಗೆ ದೊರೆಯುವ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರೈತರ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ತಾಲೂಕಿನ ರೈತರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಪ್ರತಿಭಟನೆ ಬೆಳಗ್ಗೆಯಿಂದ ಆರಂಭವಾಗಿ ವಿವಿಧ ಹಂತಗಳಲ್ಲಿ ನಡೆಯಲಿದ್ದು, ಬಳಿಕ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ. ಮಹೇಶ, ಯುವ ಮೋರ್ಚಾ ಅಧ್ಯಕ್ಷ ಉಮೇಶ್ ಯಾದವ್, ಅಶೋಕ್ ಬಳೂಟಿಗಿ, ಸಂಗಪ್ಪ ಕಡಿವಾಲ್, ಮರಸಣ್ಣ ತಾಳದ್, ಶಶಿಧರ ಕವಲಿ, ಸುಖಮನಿ ಕೊರಡಕೇರ, ಪ್ರಭುಶಂಕ್ರಗೌಡ ಪಾಟೀಲ, ಅಮಿನುದ್ದೀನ್ ಮುಲ್ಲಾ, ಶರಣು ವಡಿಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.