ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಶೀಘ್ರ ಭರ್ತಿಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಸರ್ಕಾರಿ ನೇಮಕಾತಿಗಳಲ್ಲಿ ಅಕ್ರಮ ತಡೆಗಟ್ಟಬೇಕು, ಪಾರದರ್ಶಕತೆಯನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಕೃಷ್ಣ, ರಾಜ್ಯದಲ್ಲಿ ಯುವಜನತೆ ನಿರುದ್ಯೋಗದಿಂದ ಕಂಗಾಲಾಗಿದ್ದಾರೆ. ಉದ್ಯೋಗ ಪಡೆಯಲು ಅವಿರತ ಅಧ್ಯಯನ, ಪರಿಶ್ರಮ ನಡೆಸಿದರೂ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯದೇ ಬೇಸತ್ತಿದ್ದಾರೆ. ಭವಿಷ್ಯದ ಬಗ್ಗೆ ಭರವಸೆ ಕಳೆದುಕೊಂಡು ಸಿನಿಕತೆಗೆ ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೂಡಾ ತಾನು ನೀಡಿದ ಭರವಸೆ ಮರೆತಿದೆ. ಅಧಿಕಾರಕ್ಕೆ ಬಂದು 2 ವರ್ಷ 4 ತಿಂಗಳು ಕಳೆದರೂ ಒಳ ಮೀಸಲಾತಿ ನಿರ್ಧಾರದ ಹೆಸರಿನಲ್ಲಿ ಯಾವುದೇ ನೇಮಕಾತಿ ಮಾಡಿಲ್ಲ. ಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರ ಕಾರ್ಯರೂಪಕ್ಕೆ ತರುವುದೆಂದು ನಿರೀಕ್ಷೆಯಲ್ಲಿ ಇದ್ದ ಯುವಜನತೆ ಭ್ರಮ ನಿರಸನರಾಗಿದ್ದಾರೆಂದರು.
2025-26 ನೇ ಸಾಲಿಗೆ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಬಿದ್ದಿವೆ. ಅವುಗಳ ನೇಮಕಕ್ಕೆ ಕಿಂಚಿತ್ತೂ ಪ್ರಯತ್ನಗಳು ನಡೆಯುತ್ತಿಲ್ಲ. ಒಂದಿಲ್ಲೊಂದು ನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ. ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ. ನಾಲ್ಕೈದು ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದ ಅದೆಷ್ಟೋ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಆತ್ಮಹತ್ಯೆಯಂತಹ ಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ ಎಂದು ವಿಷಾದಿಸಿದರು.ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 59,454 ಹುದ್ದೆಗಳು ಖಾಲಿ ಬಿದ್ದಿವೆ. ಆರೋಗ್ಯ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಕಂದಾಯ, ಒಳಾಡಳಿತ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬಹಳ ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದ ಜನಸಾಮಾನ್ಯರಿಗೆ ಸಿಗಬೇಕಾದ ಸೇವೆಗಳು ಸರಿಯಾಗಿ ತಲುಪುತ್ತಿಲ್ಲ. ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ತುಂಬಿಕೊಂಡು ಪುಡಿಗಾಸಿಗೆ, ಉದ್ಯೋಗ ಭದ್ರತೆ ನೀಡದೇ ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.
ಸರ್ಕಾರಗಳು ಯಾವುದೇ ನೆಪಗಳನ್ನು ಹೇಳದೆ, ಕೆಲವೇ ಹುದ್ದೆಗಳ ಭರ್ತಿಗೆ ಸೀಮಿತಗೊಳಿಸದೆ ಎಲ್ಲ ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ನಾಲೈದು ವರ್ಷಗಳಿಂದ ನೇಮಕಾತಿಗಳು ನಡೆಯದ ಕಾರಣ ಅರ್ಹತಾ ವಯೋಮಿತಿಯಲ್ಲಿ ಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಬೇಕು. ಇಂತಹ ಪರಿಸ್ಥಿತಿಯಲ್ಲಿ ಇತ್ತೀಚಿಗೆ ಕೆಇಎ ಮೂಲಕ ಹೊರಡಿಸಿರುವ ಅಧಿಸೂಚನೆಯಲ್ಲಿ ವಿವಿಧ ಹುದ್ದೆಗಳಿಗೆ ದುಬಾರಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ಅದನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು. ರವಿಕುಮಾರ್, ತಿಪ್ಪೇಸ್ವಾಮಿ, ಭವಾನಿ, ಕೊಟ್ರೇಶ್, ನಯನ, ರಘು, ಮಲ್ಲಿಕಾರ್ಜುನ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.