ಮೇಕೆದಾಟು ಯೋಜನೆ ಅನುಷ್ಠಾನವಾಗಬೇಕು, ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಉದ್ದಿಮೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡುವುದು ಸೇರಿದಂತೆ ಕನ್ನಡಪರ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಮೇಕೆದಾಟು ಯೋಜನೆ ಅನುಷ್ಠಾನವಾಗಬೇಕು, ಕನ್ನಡ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಉದ್ದಿಮೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡುವುದು ಸೇರಿದಂತೆ ಕನ್ನಡಪರ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿ, ಕನ್ನಡನಾಡು, ನುಡಿ, ಗಡಿ ನೀರಾವರಿ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾಕುಮಾರ್ ಮಾತನಾಡಿ, ವಸಂತನರಸಾಪುರ, ಎಚ್‌ಎಎಲ್‌ಗೆ ಕನ್ನಡಿಗ ರೈತರು ಜಮೀನು ಕೊಟ್ಟಿದ್ದಾರೆ. ಆದರೆ ಇಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಟ್ಟಿಲ್ಲ, ಪರಭಾಷಿಗರೇ ತುಂಬಿಕೊಂಡಿದ್ದಾರೆ. ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಸರ್ಕಾರದ ಆದೇಶವಿದ್ದರೂ ಅದರ ಪಾಲನೆ ಆಗುತ್ತಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲೂ ಕನ್ನಡಿಗರ ಕೊರತೆ ಇದೆ ಎಂದರು.

ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಪದಗಳಿರಬೇಕು ಎಂದು ಸರ್ಕಾರವೇ ಆದೇಶ ಮಾಡಿದೆ. ಆದರೆ ಸರ್ಕಾರದ ಆದೇಶವನ್ನು ಸರ್ಕಾರಿ ಅಧಿಕಾರಿಗಳೇ ಉಲ್ಲಂಘನೆ ಮಾಡುತ್ತಿದ್ದಾರೆ. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ತಾವು ಹಲವು ಬಾರಿ ಜಿಲ್ಲಾಧಿಕಾರಿಗಳು, ನಗರಪಾಲಿಕೆ ಆಯುಕ್ತರಿಗೆ ಮನವಿ ಮಾಡಿದರೂ ಅವರು ಕನ್ನಡ ರಹಿತ ನಾಮಫಲಕಗಳ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಅನುಷ್ಠಾನ ಆಗಬೇಕು. ಕನ್ನಡ ರಾಜ್ಯೋತ್ಸವದಂದು ಕಪ್ಪು ಬಾವುಟ ಪ್ರದರ್ಶಿಸಿ ಕನ್ನಡಿಗರಿಗೆ ಅವಮಾನ ಮಾಡುವ ಬೆಳಗಾವಿಯ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು. ಸರ್ಕಾರದ ಆದೇಶದಂತೆ ಕೈಗಾರಿಕೆಗಳಲ್ಲಿ ಶೇಕಡ 80ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು. ನಾಮಫಲಕಗಳಲ್ಲಿ ಶೇಡಕ 60 ರಷ್ಟು ಕನ್ನಡ ಅಕ್ಷರಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚು ಅನುದಾನ ನೀಡಬೇಕು. ಕನ್ನಡ ಶಾಲೆ ಮುಚ್ಚಕೂಡದು. ಬಿಡದಿ ಟೌನ್‌ಶಿಪ್ ರದ್ದು ಮಾಡಬೇಕು, ಅಲ್ಲಿನ ರೈತರ ಮೇಲಿನ ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಡಾ.ಧನಿಯಾಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ ಮಾತನಾಡಿ, ವರ್ಷದಿಂದ ವರ್ಷಕ್ಕೆ ಕನ್ನಡ ಶಾಲೆಗಳು ಮುಚ್ಚಿಹೋಗುತ್ತಿವೆ. ಶಾಲೆಗಳನ್ನು ಉಳಿಸಿ ಬೆಳೆಸುವ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ. ಐಎಎಸ್, ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು, ಸರ್ಕಾರಿ ನೌಕರರು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಮಾದರಿಯಾಗಬೇಕು. ಅದರೊಂದಿಗೆ ಕನ್ನಡ ಶಾಲೆಗಳು ತಾನಾಗೇ ಬೆಳವಣಿಗೆಯಾಗುತ್ತವೆ ಎಂದರು.ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆ ಅಧ್ಯಕ್ಷ ಹೊಸಕೋಟೆ ನಟರಾಜ್ ಮಾತನಾಡಿ, ಕಾರ್ಖಾನೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಶೇಕಡ 60ರಷ್ಟು ಉದ್ಯೋಗ ಮೀಸಲಿಡಬೇಕು. ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಕನ್ನಡಿಗರು ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಕನ್ನಡ ಮತ್ತು ಸಂಸ್ಕೃತಿ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜು ಮಾತನಾಡಿ, ಕನ್ನಡಿಗರ ಉದ್ಯೋಗಕ್ಕೆ ಮನ್ನಣೆ ನೀಡಲು ಸರ್ಕಾರ ಬದ್ಧವಾಗಿರಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಕಡೆಗಣಿಸದೆ ಆದ್ಯತೆ ಮೇಲೆ ಅಭಿವೃದ್ಧಿ ಮಾಡಿ ಪೋಷಕ ಸ್ನೇಹಿಗೊಳಿಸಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಕನ್ನಡ ಸೇನೆ ಗೌರವಾಧ್ಯಕ್ಷ ಆರ್.ಎ.ವೆಂಕಟಾಚಲ, ನಗರ ಅಧ್ಯಕ್ಷ ಜೆ. ವಿಠಲ್, ರೈತ ಸಂಘದ ಬಸವರಾಜು, ಅಖಿಲ ಕರ್ನಾಟಕ ಕಾರ್ಮಿಕರ ಪ್ರಜಾವೇದಿಕೆ ಅಧ್ಯಕ್ಷ ಮೀಸೆ ಸತೀಶ್, ಜಿಲ್ಲಾ ಕಾರ್ಯದರ್ಶಿ ಪುರುಷೋತ್ತಮ್, ವಿವಿಧ ಸಂಘಟನೆಗಳ ಮುಖಂಡರಾದ ಮಲ್ಲಸಂದ್ರ ಶಿವಣ್ಣ, ಶಬ್ಬೀರ್‌ ಅಹ್ಮದ್, ಮೀಸೆ ಸತೀಶ್, ನಟರಾಜಶೆಟ್ಟಿ, ದಿಬ್ಬೂರು ಗಿರೀಶ್,ಮಧು, ಪ್ರಸನ್ನಕುಮಾರ್, ರಫಿಅಹ್ಮದ್, ಕಾಮರಾಜ್, ಮಾರುತಿ, ಸುಕನ್ಯಾ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ಭೀಮಾನಾಯ್ಕ, ಉಮೇಶ್‌ಕುಮಾರ್, ವಿ.ಡಿ. ರಾಯ್, ರಂಗಸ್ವಾಮಿ ಮೊದಲಾದವರು ಭಾಗವಹಿಸಿದ್ದರು.