ತಾಲೂಕಿನ ಬಳಗಾನೂರು ಪಪಂ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಲ್ಯಾಪ್‌ಟಾಪ್, ಶೈಕ್ಷಣಿಕ ಸಾಮಗ್ರಿ ಹಾಗೂ ಪ್ರೋತ್ಸಾಹಧನ ವಿತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಸಮಿತಿಯು ಪಪಂ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ತಾಲೂಕಿನ ಬಳಗಾನೂರು ಪಪಂ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಲ್ಯಾಪ್‌ಟಾಪ್, ಶೈಕ್ಷಣಿಕ ಸಾಮಗ್ರಿ ಹಾಗೂ ಪ್ರೋತ್ಸಾಹಧನ ವಿತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಸಮಿತಿಯು ಪಪಂ ಸಿಬ್ಬಂದಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ ತಾಲೂಕು ಅಧ್ಯಕ್ಷ ಮೌನೇಶ್ ತುಗ್ಗಲದಿನ್ನಿ, ಕಳೆದ ನಾಲ್ಕೈದು ವರ್ಷಗಳಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ವಿತರಿಸಿಲ್ಲ ಹಾಗೂ ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಿಲ್ಲ ಎಂಬ ದೂರುಗಳಿವೆ. ಇದರಿಂದ ಅರ್ಹ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ತಿಳಿಸಿದರು.
ಸರ್ಕಾರವು ಸ್ಥಳೀಯ ಸಂಸ್ಥೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅನುದಾನ ಮೀಸಲಿಡುತ್ತದೆ. ಆದರೆ, ಈ ಅನುದಾನಕ್ಕೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ಆಯ್ಕೆ ಮತ್ತು ಅನುದಾನದ ಬಳಕೆಯ ಕುರಿತು ಅಧಿಕಾರಿಗಳು ಪಾರದರ್ಶಕತೆ ಕಾಯ್ದು ಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೌಲಭ್ಯಗಳು ತಲುಪದಿರುವುದಕ್ಕೆ ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.ವಿದ್ಯಾರ್ಥಿಗಳಿಗಾಗಿ ಮೀಸಲಾದ ಅನುದಾನದ ಹಂಚಿಕೆ ಮತ್ತು ಬಳಕೆಯಲ್ಲಿ ಯಾವುದೇ ಅಕ್ರಮ ಅಥವಾ ದುರ್ಬಳಕೆ ನಡೆದಿದ್ದರೆ, ಅದನ್ನು ಸಂಬಂಧಪಟ್ಟ ದಾಖಲೆಗಳ ಮೂಲಕ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು, ಕೂಡಲೇ ಅರ್ಹ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿ, ನಿಯಮಾ ನುಸಾರ ಕ್ರಮ ಕೈಗೊಳ್ಳಬೇಕು. ಬೇಡಿಕೆ ಈಡೇರದಿದ್ದರೆ ಮುಂದಿನ ಹಂತದಲ್ಲಿ ಪಪಂ ಕಚೇರಿ ಎದುರು ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ ಗಂಗಾಧರ ಬಳಗಾನೂರು, ರಮೇಶ ಬಳಗಾನೂರು, ಸೋಮನಾಥ ಬಳಗಾನೂರು ಸೇರಿದಂತೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಮುಖಂಡರು ಉಪಸ್ಥಿತರಿದ್ದರು.