ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿ ಮಾಡಬೇಕು. ಕೆಪಿಟಿಸಿಎಲ್ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ತೆಗೆದು ಐಟಿಐ ಪಾಸಾದವರಿಗೆ ಮಾತ್ರ ಅವಕಾಶ ನೀಡಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ರೈತರು, ಐಟಿಐ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೆಪಿಟಿಸಿಎಲ್‌ನಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆದರೆ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ನಿಗದಿಪಡಿಸಲಾಗಿದೆ. ಇದರಿಂದ ಐಟಿಐ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಕೆಪಿಟಿಸಿಎಲ್ ಕಂಪನಿ ಬಗ್ಗೆಯಾಗಲಿ, ವಿದ್ಯುತ್ ಕುರಿತಾಗಲಿ ಯಾವುದೇ ಮಾಹಿತಿ ಇರುವುದಿಲ್ಲ. ಇದಕ್ಕೆ ಐಟಿಐ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿ ಮಾಡಬೇಕು. ಜಿಲ್ಲಾಧಿಕಾರಿ ಅ.29 ರಂದು ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ ಜೊತೆಗೆ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆಗೆ ಕಬ್ಬು ಬೆಳೆಗಾರರಿಗೆ ಮಾತನಾಡಲು ಅವಕಾಶ ನೀಡಬೇಕು. ಸಕ್ಕರೆ ಕಾರ್ಖಾನೆಗಳು ದರ ಮತ್ತು ತೂಕದಲ್ಲಿ ಮೋಸ ಮಾಡುತ್ತಿವೆ. ಕಬ್ಬು ಸಾಗಾಣಿಕೆ ಮತ್ತು ಕಟಾವಿನ ವೆಚ್ಚವನ್ನು ಕಬ್ಬು ಬೆಳೆಗಾರರ ಮೇಲೆ ಹೊರಿಸಲಾಗುತ್ತಿದೆ. ಪ್ರತಿ ಟನ್ ಕಬ್ಬಿಗೆ ₹ 5 ಸಾವಿರ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದರು.ಅತಿವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಸೋಯಾಬೀನ್ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ರೈತರ ನೆವರಿಗೆ ಧಾವಿಸಿ ಪ್ರತಿ ಎಕರೆಗೆ ₹20 ಸಾವಿರ ಬೆಳೆಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಬೆಳೆವಿಮೆ ಹಣ ರೈತರಿಗೆ ತಲುಪಿಸಬೇಕು. ರೈತರ ಮೇಲೆ ಅನ್ಯಾಯ ಮುಂದುವರಿದರೆ, ಚಳಿಗಾಲ ಅಧಿವೇಶನ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.