ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಒತ್ತಾಯ

| Published : Aug 11 2025, 12:33 AM IST

ಸಾರಾಂಶ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಸಮಿತಿ ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಸಮಿತಿ ಒತ್ತಾಯಿಸಿದೆ.

ಆಶಾ ಕಾರ್ಯಕರ್ತೆಯರು ವಿಜಯನಗರ ಜಿಲ್ಲಾ ಮಟ್ಟದ ಅಹೋರಾತ್ರಿ ಧರಣಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಆ. 12, 13 ಹಾಗೂ 14ರಂದು ನಡೆಸಲಿದ್ದಾರೆ. ಧರಣಿ ಹಿನ್ನಲೆ ಪೋಸ್ಟರ್ ಬಿಡುಗಡೆ ಮಾಡಿದ ಸಂಘದ ಗೌರವ ಅಧ್ಯಕ್ಷ ಡಾ. ಪ್ರಮೋದ್ ಎನ್., ಜಿಲ್ಲಾ ಅಧ್ಯಕ್ಷೆ ಗೀತಾ, ನಗರ ಅಧ್ಯಕ್ಷೆ ಗೌರಿ, ಶ್ವೇತಾ, ಲಕ್ಷ್ಮಿ ಮತ್ತಿತರರು ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಈಡೇರಿಸಬೇಕು. ರಾಜ್ಯ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು ಎಂದರು.

ಹಕ್ಕೊತ್ತಾಯಗಳು:

ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. 2025ರ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು. ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿದರು.

ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ನಗರ ಆಶಾಗಳಿಗೆ ₹2000 ಗೌರವಧನ . ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.