ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

| Published : Jan 25 2024, 02:01 AM IST

ಸಾರಾಂಶ

ರಾಮನಗರ: ವೇತನ ಹೆಚ್ಚಳ, ಪಿಂಚಣಿ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಮನಗರ: ವೇತನ ಹೆಚ್ಚಳ, ಪಿಂಚಣಿ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಎದುರು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವೂ ಗ್ರಾಮ ಪಂಚಾಯಿತಿ ನೌಕರರಿಗೆ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ರಾಜ್ಯದ ಉಚ್ಛ ನ್ಯಾಯಾಲಯ ರದ್ದು ಮಾಡಿ, ರೆಪ್ತೋಶ್ ಬ್ರೆಟ್ ಕೇಸಿನಲ್ಲಿ ಸುಪ್ರೀಂಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಯನ್ನು ಅನುಸರಿಸಿ ಕನಿಷ್ಠ ವೇತನ ನಿಗದಿಪಡಿಸಬೇಕೆಂದು ನ್ಯಾಯಾಲಯ ಆದೇಶಿಸಿತು. ಸಂಘ ನ್ಯಾಯಾಲಯದ ಆದೇಶವನ್ನು ಜಾರಿ ಮಾಡುವಂತೆ ಹೋರಾಟ ರೂಪಿಸಿದ ಮೇಲೆ ಕಾರ್ಮಿಕ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಮತ್ತು ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದ್ದು, ಆದರೂ, ಸರಕಾರ ಮೀನಮೇಷ ಎಣಿಸುತ್ತಿದೆ. ತಕ್ಷಣ ಕನಿಷ್ಠ ವೇತನ ೩೧ ಸಾವಿರ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂಡ ಡಾಟಾ ಎಂಟ್ರಿ ಆಪರೇಟರ್ ಜವಾನ, ನೀರು ಗಂಟಿ, ಸ್ವಚ್ಛತಾಗಾರರು, ಇತ್ಯಾದಿ ನೌಕರರು ಗ್ರಾಮ ಪಂಚಾಯಿತಿಗಳಲ್ಲಿ ಆರಂಭವಾದ ಕಾಲದಿಂದಲೂ ಕನಿಷ್ಠ ಕೂಲಿ ಹೊರತುಪಡಿಸಿ ಬೇರೆ ಯಾವುದೇ ಸೌಲಭ್ಯವಿಲ್ಲದೆ ತಮ್ಮ ಜೀವಮಾನದಲ್ಲಿಯೆ ದುಡಿದು ನಿವೃತ್ತಿಯಾದಾಗ ಇಳಿ ವಯಸ್ಸಿನಲ್ಲಿ ಜೀವನ ನಡೆಸುವುದಕ್ಕೆ ಬಹಳ ಕಷ್ಟಕರವಾಗುತ್ತಿದೆ. ಸರ್ಕಾರವೇ ಪಿಂಚಣಿ ನೀಡಲು ಒಂದು ಆಯೋಗ ರಚನೆ ಮಾಡಿತ್ತು. ಆ ಸಮಿತಿ ವರದಿಯನ್ನು ಇಲಾಖೆಗೆ ನೀಡಿದೆ. ಹಾಗಾಗಿ ತಕ್ಷಣವೇ ಪಿಂಚಣಿ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರವಾದ ನೀತಿಗಳನ್ನು ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯಬೇಕು. ರೈತ ಬೆಳೆಗಳಗೆ ಲಾಭದಾಯ ಬೆಂಬಲ ಬೆಲೆ ಬೇಕು, ಖಾತರಿಪಡಿಸಬೇಕು. ರಸಗೊಬ್ಬರ ಒಳಗೊಂಡಂತೆ ಕೃಷಿ ಹಿಡುವಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಯನ್ನು ಕೈಬಿಡಬೇಕು ಎಂದು ಪ್ರತಿಭಟನಾ ನಿತರರು ಆಗ್ರಹಿಸಿದರು.

ರೈಲ್ವೆ, ವಿದ್ಯುತ್ ಸೇರಿದಂತೆ ಎಲ್ಲಾ ಕ್ಷೇತ್ರವನ್ನು ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು. ಗ್ರಾಪಂ ನೌಕರರಿಗೆ ಕನಿಷ್ಟ ವೇತನ 31 ಸಾವಿರ ನಿಗದಿ ಮಾಡಬೇಕು. ಕನಿಷ್ಠ ಪಿಂಚಣಿ 6 ಸಾವಿರನಿಗಧಿ ಮಾಡಬೇಕು. ಐಪಿಡಿ ಸಾಲಪ್ಪ ವರದಿಯಂತೆ ಸ್ವಚ್ಛತಾಗಾರರನ್ನು ಗ್ರಾಪಂಗಳಲ್ಲಿ ನೇಮಕ ಮಾಡಬೇಕು. ಸೇವಾ ಹಿರಿತನ ಪರಿಶೀಲಿಸಿ ವೇತನ ಹೆಚ್ಚಳ ಮಾಡಬೇಕು. ತೀವ್ರವಾದ ಅನಾರೋಗ್ಯಕ್ಕೆ ತುತ್ತಾದ ನೌಕರರಿಗೆ ಆಸ್ಪತ್ರೆ ವೆಚ್ಚ ಬರಿಸಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ನೇಮಕಾತಿ ರದ್ಧು ಮಾಡಬೇಕು. ಗ್ರಾಪಂಗಳಲ್ಲಿ ಕಾರ್‍ಯನಿರ್ವಹಿಸುತ್ತಿರುವ ನೌಕರರಿಗೆ ವರ್ಗಾವಣೆಗೆ ಅವಕಾಶ ಕೊಡಬೇಕು. ನೀರುಗಂಟಿಗಳಿಗೆ ಮಲ್ಟಿಪರ್ಪಸ್ ಎಂದಿರುವುದುನ್ನು ಕೈಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಗೊಳಿಸಬೇಕು. ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರ ಹುದ್ದೆಯನ್ನು ನಿಗದಿಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ಪ್ರದೀಪ್, ಜಿ. ರಾಮಕೃಷ್ಣ, ಜಯಲಿಂಗು, ಪ್ರಸಾದ್, ಖಮರುದ್ದೀನ್ ಪಾಷ, ರಾಜೇಶ್, ಸುರೇಶ್, ನಾಗರಾಜು ಪರಮಶಿವಮೂರ್ತಿ ಮತ್ತಿತರರು ಭಾಗವಹಿಸಿದ್ದರು.

24ಕೆಆರ್ ಎಂಎನ್ 2.ಜೆಪಿಜಿ

ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಗ್ರಾಪಂ ನೌಕರರು ಪ್ರತಿಭಟನೆ ನಡೆಸಿದರು.