ಕನ್ನಡಪ್ರಭ ವಾರ್ತೆ ಹಿರಿಯೂರು
ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪ್ರಯಾಣಿಕರ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಮನವರಿಕೆ ಮಾಡಿಕೊಟ್ಟು ಶೀಘ್ರ ಆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಭೇಟಿ ಮಾಡಿದ ಸಚಿವ ಡಿ.ಸುಧಾಕರ್ ಅವರು
ಹಿರಿಯೂರು ನಗರ ಬಸ್ ನಿಲ್ದಾಣದ 4 ವಿಭಾಗಗಳಿಂದ ಸುಮಾರು 800ಕ್ಕೂ ಹೆಚ್ಚು ಬಸ್ಸುಗಳು ಸಂಚಾರ ಮಾಡುತ್ತಿದ್ದು ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾತ್ರಿ 7 ಗಂಟೆಯ ನಂತರ ಹಲವು ಬಸ್ಸುಗಳು ಹಿರಿಯೂರು ನಗರದ ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೇ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಜೆ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟು ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಮುಖಾಂತರ ಸಂಚರಿಸುವ ಬಸ್ಸುಗಳು ಹಿರಿಯೂರು ನಗರದ ಒಳಗೆ ಬರದೇ ಬೈಪಾಸ್ ಮೂಲಕ ಹೋಗುವ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಪ್ರಯಾಣಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್ಸುಗಳು ಹಿರಿಯೂರು ನಗರದ ಒಳಗೆ ಕಡ್ಡಾಯವಾಗಿ ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವರು ಈ ವಿಷಯವನ್ನು ತುರ್ತಾಗಿ ಗಮನಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೊತೆಗೆ ಹಿರಿಯೂರು ನಗರದ ಗಾಂಧಿವೃತ್ತ ಮತ್ತು ಟಿಬಿ ವೃತ್ತ ಪ್ರದೇಶಗಳಿಗೆ ಪ್ರತ್ಯೇಕ ಹಂತಗಳನ್ನು ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವ ಡಿ.ಸುಧಾಕರ್ ಮನವಿ ಮಾಡಿದರು.