ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯ

| Published : Jul 07 2025, 11:47 PM IST

ಸಾರಾಂಶ

ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆ ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡ ಒಡ್ಡುತ್ತಿದೆ.

ಕನ್ನಡಪ್ರಭ ವಾರ್ತೆ ಕೋಲಾರಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿ ಪಠ್ಯವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಕರವೇ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ, ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಹಿಂದಿ ಹೇರಿಕೆಗೆ ಆಕ್ಷೇಪ

ಸಿಬಿಎಎಸ್‌ಇ, ಐಸಿಎಸ್‌ಇ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು, ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣವನ್ನು ನೀಡಬೇಕು. ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡ, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿ ಕಲಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆ ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡ ಒಡ್ಡುತ್ತಿದೆ. ೨೦೨೪ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ, ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ಶೇ.೨೧ರಷ್ಟಿದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹೊರೆ

೨೦೨೫ರಲ್ಲಿ ಹಿಂದಿ ಫೇಲಾದವರ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ ಎಂದರು.

ತ್ರಿಭಾಷಾ ನೀತಿಯಿಂದ ಲಾಭವಿಲ್ಲ

ಕರ್ನಾಟಕದ ಸಾಂಸ್ಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡವು ಕೇಂದ್ರ ಸ್ಥಾನ ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲೀಷ್ ಭಾಷೆ ಜಾಗತಿಕ ವ್ಯವಹಾರಗಳಿಗೆ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿದೆ. ಆದರೆ, ಹಿಂದಿ ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ, ಇದರಿಂದ ಒಬ್ಬನೇ ಒಬ್ಬ ಕನ್ನಡಿನಿಗೂ ಉದ್ಯೋಗ ದೊರೆತಿಲ್ಲ ಎಂದರು. ದ್ವಿಭಾಷಾ ನೀತಿ ಜಾರಿಯಾಗಲಿ

ತಮಿಳುನಾಡು ೧೯೬೮ರಿಂದಲೇ ತ್ರಿಭಾಷಾ ನೀತಿ ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ, ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದರು. ಇದೇ ರೀತಿ ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಷ್ಠಾನಕ್ಕೆ ತರುವಂತೆ ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಪದಾದಿಕಾರಿಗಳಾದ ವಿ.ಮುನಿರಾಜು, ತಾಲ್ಲೂಕು ಅಧ್ಯಕ್ಷರಾದ ಎಂ.ಶ್ರೀನಾವಾಸ, ಶಶಿಕುಮಾರ, ರಾಮಪ್ರಸಾದ್, ಪದಾಧಿಕಾರಿಗಳಾದ ಮಹಬೂಬ್, ಎನ್.ಮಂಜುನಾಥ, ಶಂಕರ್ ರೆಡ್ಡಿ, ಡಿ.ವಿ.ಮಂಜುನಾಥ, ಹುಸೇನ್, ಕೋದಂಡರಾಮಯ್ಯ, ಗಣೇಶ್, ಲೋಕೇಶ್, ಕೆ.ನವೀನ್, ಸಂತೋಷ್, ಮಂಜುನಾಥಗೌಡ, ರಾಮಕೃಷ್ಣಪ್ಪ, ನವೀನ್, ರಂಜಿತ್ ಇದ್ದರು.