ಆರ್‌ಸಿ ಕಚೇರಿ ಎದುರು ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹ

| Published : Jan 09 2024, 02:00 AM IST

ಸಾರಾಂಶ

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಕೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ಕನ್ನಡ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಳೆ ಜಿಪಂ ಕಚೇರಿ ಎದುರಿಗೆ ಈಗಾಗಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ ನಿಜ. ಆದರೆ, ಜಿಪಂ ಕಚೇರಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿರುವುದರಿಂದ ಈ ಸ್ಥಳಕ್ಕೆ ಪ್ರಾಮುಖ್ಯತೆ ಸಿಗುತ್ತಿಲ್ಲ. ಸರ್ಕಾರ, ಸಂಘ- ಸಂಸ್ಥೆಗಳಿಂದ ದೊರೆಯಬೇಕಾದ ಗೌರವ ರಾಯಣ್ಣ ಪ್ರತಿಮೆಗೆ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಚನ್ನಮ್ಮ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆಗೆ ಸಂಗೊಳ್ಳಿ ರಾಯಣ್ಣನ ಹೆಸರು ನಾಮಕರಣ ಮಾಡಿ ಹಲವಾರು ದಶಕಗಳೇ ಕಳೆದಿವೆ. ಈ ರಸ್ತೆ ಬದಿಯಲ್ಲೇ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವುದು ಅಗತ್ಯವಾಗಿದೆ. ಅದಕ್ಕೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರಿನ ಸ್ಥಳ ಯೋಗ್ಯವಾಗಿದೆ. ಹಾಗಾಗಿ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಸವಿತಾ ಸಾತಪುತೆ, ಹಣಮಂತ ಬುಚಡಿ, ಕಸ್ತೂರಿ ಬಾವಿ, ಮಲ್ಲಪ್ಪ ಸೊಂಟಕ್ಕಿ ಮೊದಲಾದವರು ಪಾಲ್ಗೊಂಡಿದ್ದರು.