ಸಾರಾಂಶ
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ನಿಲ್ಲಿಸಬೇಕು. ಈ ಬಗ್ಗೆ ತನಿಖೆ ನಡೆಸಬೇಕು
ಕಾರವಾರ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ನಿಲ್ಲಿಸಬೇಕು. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಧರ್ಮಸ್ಥಳದ ಭಕ್ತ ಅಭಿಮಾನಿಗಳ ವೇದಿಕೆಯ ಸದಸ್ಯರು ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸೂರಜ್ ನಾಯ್ಕ, ಕೆಲವರು ವಿರೇಂದ್ರ ಹೆಗ್ಗಡೆ ಅವರ ಕುಟುಂಬದ ವಿರುದ್ಧ ಕೀಳು ಮಟ್ಟದಲ್ಲಿ ಮಾತನಾಡಿ, ಯುಟ್ಯೂಬ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಭಕ್ತರ ನಂಬಿಕೆಯ ಕೇಂದ್ರವಾದ ಧರ್ಮಸ್ಥಳವನ್ನು ಆರೋಪಗಳ ಕೇಂದ್ರವಾಗಿಸುವುದು ಭಕ್ತರಿಗೆ ನೋವುಂಟು ಮಾಡಿದೆ ಎಂದೂ ಅವರು ತಿಳಿಸಿದರು.
ಈ ಅಪಪ್ರಚಾರದಲ್ಲಿ ತೊಡಗಿರುವ ವ್ಯಕ್ತಿಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸರ್ಕಾರದ ವತಿಯಿಂದ ವಿಶೇಷ ತನಿಖಾ ತಂಡ ರಚಿಸಿರುವುದನ್ನು ಸ್ವಾಗತಿಸಿದ ಸೂರಜ್ ನಾಯ್ಕ, ಈ ತನಿಖೆಯನ್ನು ಪೂರ್ಣಗೊಳಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.ಮಾಜಿ ಶಾಸಕ ಗಂಗಾಧರ ಭಟ್, ಜೆಡಿಎಸ್ ಮುಖಂಡ ಉಪೇಂದ್ರ ಪೈ, ರಾಜು ಮಾಸ್ತಿಹಳ್ಳ, ಭಾಸ್ಕರ ನಾರ್ವೇಕರ, ಹನುಮಂತ ಗೌಡ ಬೆಳಂಬಾರ, ಹಾಗೂ ಕಾರವಾರ ನಗರಸಭೆಯ ಕೆಲವು ಸದಸ್ಯರು ಇದ್ದರು. ಅಪರ ಜಿಲ್ಲಾಧಿಕಾರಿ ಮನವಿ ಸ್ವೀಕರಿಸಿ ಅದನ್ನು ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು.