ಸಾರಾಂಶ
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನವನಗರದ ಜಿಲ್ಲಾಡಳಿತ ಭವನದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಸಮಗ್ರ ಕಾನೂನು ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.ನವನಗರದ ಜಿಲ್ಲಾಡಳಿತ ಭವನದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿ, ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಸೇರಿದಂತೆ ಅನೇಕ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿದರು.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟಕ್ಕೆ ಸ್ಪಂದಿಸಿ ಸರ್ಕಾರ ಕಾಯ್ದೆ ರೂಪಿಸಿ ಜಾರಿಗೊಳಿಸಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದ ಕರವೇ ಜಿಲ್ಲಾಧ್ಯಕ್ಷ ಬಸವ ರಾಜ ಧರ್ಮಂತಿ, ಉದ್ಯೋಗಕ್ಕೆ ಸಂಬಂಧಿಸಿದ ಕಾಯ್ದೆಜಾರಿ ಮಾಡಿದರೆ ರಾಜ್ಯದ ಕನ್ನಡ ಪೀಳಿಗೆ ತಮ್ಮನ್ನು ಸದಾ ಸ್ಮರಿಸುತ್ತದೆ ಎಂದು ಹೇಳಿದರು. ಧರಣಿಯಲ್ಲಿ ಸಂಗಮೇಶ ಅಂಬಿಗೇರ, ರಾಜೇಶ್ವರಿ ಹಿರೇಮಠ, ಬಸವರಾಜ ಅಂಬಿಗೇರ, ಕಿರಣ ಗಾಳಿ, ಶಿವಾನಂದ ಲೆಂಕಣ್ಣವರ, ಕಾರ್ಯಕರ್ತರು ಭಾಗವಹಿಸಿದ್ದರು.