ಕನ್ನಡಪ್ರಭ ವಾರ್ತೆ ಬೆಳಗಾವಿ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸದನಕ್ಕೆ ತಪ್ಪು ಮಾಹಿತಿ ನೀಡಿ, ₹ 5 ಸಾವಿರ ಕೋಟಿಯಷ್ಟು ದೊಡ್ಡ ಭ್ರಷ್ಟಾಚಾರದ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸದನಕ್ಕೆ ತಪ್ಪು ಮಾಹಿತಿ ನೀಡಿ, ₹ 5 ಸಾವಿರ ಕೋಟಿಯಷ್ಟು ದೊಡ್ಡ ಭ್ರಷ್ಟಾಚಾರದ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಕ್ಕಾ... ಅಕ್ಕಾ... ಎಲ್ಲಿದೆ ರೊಕ್ಕಾ?, ಯಾರದರ ರೊಕ್ಕ ಲಕ್ಷ್ಮೀ ಅಕ್ಕಾನ ಜಾತ್ರೆ, ಹೆಣ್ಣು ಮಕ್ಕಳ ರೊಕ್ಕ ಕಾಂಗ್ರೆಸ್‌ ಮಂತ್ರಿ ಜಾತ್ರಿ ಎಂದು ಘೋಷಣೆ ಕೂಗಿ, ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ನಾಮಫಲಕಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವೆ ಹೆಬ್ಬಾಳಕರ ದೊಡ್ಡ ಭ್ರಷ್ಟಾಚಾರದ ಹುನ್ನಾರ ಮಾಡಿ ಕನ್ನಡ ನಾಡಿನ ಗೃಹಿಣಿಯರಿಗೆ ಅನ್ಯಾಯ ಮಾಡಲು ವ್ಯರ್ಥ ಪ್ರಯತ್ನ ಮಾಡಿದ್ದಾರೆ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಾಕಿ ಉಳಿದಿರುವ ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

ಗೃಹಲಕ್ಷ್ಮೀ ಯೋಜನೆ ಹಣವನ್ನು ಫಲಾನುಭವಿಗಳಿಗೆ ನೀಡದೇ ಸಾವಿರಾರು ಕೋಟಿ ದುರುಪಯೋಗಪಡಿಸಿಕೊಂಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.

ಲಕ್ಷ್ಮೀ ಹೆಬ್ಬಾಳಕರ ಮಾಡಿರುವ ಹಗರಣವನ್ನು ಅಧಿಕಾರಿಗಳ ಮೇಲೆ ಹಾಕುವ ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್ ‌ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜಕಾರಣಿಗಳ ಒತ್ತಡಕ್ಕೆ ಮಣಿಯದೇ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಲಕ್ಷ್ಮೀ ಹೆಬ್ಬಾಳಕರ ‌ಮೇಲೆ ಆರೋಪ ಬಂದಾಗ ನಾನು ಮಹಿಳೆ ಎನ್ನುವ ಅವರು, ಗೃಹ ಲಕ್ಷ್ಮೀ ಹಣ ಎಲ್ಲಿ ಹೋಗಿದೆ ಎನ್ನುವ ಲೆಕ್ಕ ಕೊಡಬೇಕು. ಅದನ್ನು ಬಿಟ್ಟು ಉಡಾಫೆ ಹೇಳಿಕೆ ನೀಡಿ ಜಾರಿಕೊಳ್ಳುವ ಹುನ್ನಾರ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಜೆಪಿ ನಗರ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ದೀಪಾ ಕುಡಚಿ, ಜ್ಯೋತಿ ಶೆಟ್ಟಿ, ಮಹಾಂತೇಶ ಒಕ್ಕುಂದ ಮೊದಲಾದವರು ‌ಪಾಲ್ಗೊಂಡಿದ್ದರು.