ಸಾರಾಂಶ
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಖಾನಾಪುರ
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.ಪಟ್ಟಣದಲ್ಲಿ ಶುಕ್ರವಾರ ತಹಸೀಲ್ದಾರ್ ಮೂಲಕ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ 60 ಹಾಸಿಗೆಗಳ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನು ಕೋಟಿಗಟ್ಟಲೇ ಅನುದಾನವನ್ನು ವಿನಿಯೋಗಿಸಿ ನಿರ್ಮಿಸಿದೆ. ಈ ಆಸ್ಪತ್ರೆಯ ಕಟ್ಟಡ ನಿರ್ಮಾಣವಾಗಿ ಒಂದು ವರ್ಷ ಕಳೆದಿದೆ. ಆದರೆ ಇನ್ನೂ ಆಸ್ಪತ್ರೆ ಸಾರ್ವಜನಿಕರ ಬಳಕೆಗೆ ಮುಕ್ತಗೊಂಡಿಲ್ಲ. ಮುಂದಿನ 1 ತಿಂಗಳ ಒಳಗೆ ಈ ಆಸ್ಪತ್ರೆಯ ಕಾರ್ಯಾರಂಭಕ್ಕೆ ಸಂಬಂಧಪಟ್ಟವರು ಗಮನಹರಿಸಬೇಕು. ಇದಕ್ಕೆ ತಪ್ಪಿದಲ್ಲಿ ಕರವೇ ವತಿಯಿಂದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ಗ್ರೇಡ್-2 ತಹಸೀಲ್ದಾರ್ ರಾಕೇಶ ಬುವಾ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರವೇ ಪ್ರಧಾನ ಕಾರ್ಯದರ್ಶಿ ವಿಠ್ಠಲ ಹಿಂಡಲಕರ, ಸಂಘಟನಾ ಅಧ್ಯಕ್ಷ ಬಸವರಾಜ ಬಡಿಗೇರ ಸೇರಿದಂತೆ ಕರವೇ ಕಾರ್ಯಕರ್ತರು ಇದ್ದರು.