ಸಂಸದ ತುಕಾರಾಂ ರಾಜೀನಾಮೆಗೆ ಒತ್ತಾಯ

| Published : Sep 22 2024, 01:51 AM IST

ಸಾರಾಂಶ

ವಾಲ್ಮೀಕಿ ನಿಗಮದಲ್ಲಿ ದೊಡ್ಡ ಹಗರಣ ನಡೆದಿದೆ. ನಿಗಮದ ₹೧೮೭ ಕೋಟಿ ದುರುಪಯೋಗವಾಗಿದೆ.

ಸಂಡೂರು: ಮೀಸಲಾತಿ ರದ್ದುಗೊಳಿಸುವ ಕುರಿತು ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಹಾಗೂ ಸಂಸದ ಈ.ತುಕಾರಾಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.೨೩ರಂದು ಬೆಳಿಗ್ಗೆ ೧೦ ಗಂಟೆಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತು ಹೇಳಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯ ಪೂರ್ವಭಾವಿ ಸಭೆಯ ನಂತರದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಾಲ್ಮೀಕಿ ನಿಗಮದಲ್ಲಿ ದೊಡ್ಡ ಹಗರಣ ನಡೆದಿದೆ. ನಿಗಮದ ₹೧೮೭ ಕೋಟಿ ದುರುಪಯೋಗವಾಗಿದೆ. ಈ ಹಣವನ್ನು ದನ ಕಾಯುವವರು, ಬಂಗಾರದ ಅಂಗಡಿ, ಪೆಟ್ರೋಲ್ ಬಂಕ್, ಬಾರ್‌ಗಳವರಿಗೆ ಹಾಕಿದ್ದಾರೆ. ಐಶಾರಾಮಿ ಕಾರುಗಳನ್ನು ಖರೀದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ನಿಗಮದಲ್ಲಿನ ಹಗರಣವನ್ನು ಒಪ್ಪಿಕೊಂಡಿದ್ದಾರೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಬಂಧನವಾಗಿದೆ. ಅವರು ಪರಪ್ಪನ ಅಗ್ರಹಾರದಲ್ಲಿದ್ದಾರೆ ಎಂದರು.

ಈ ಹಣದಲ್ಲಿ ₹೨೧ ಕೋಟಿ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಮತ ಖರೀದಿಯ ಮೂಲಕ ಗೆಲುವು ಸಾಧಿಸಲು ಬಳಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸದ ಈ.ತುಕಾರಾಂ ರಾಜೀನಾಮೆಗೂ ಒತ್ತಾಯಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ನಂತರ ಪಕ್ಷದಿಂದ ಸಂಸದ ಈ.ತುಕಾರಾಂ ಸದಸ್ಯತ್ವವನ್ನು ರದ್ದುಗೊಳಿಸಲು ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇವೆ. ವಾಲ್ಮೀಕಿ ನಿಗಮ ಮಾತ್ರವಲ್ಲ ಹಲವು ನಿಗಮಗಳಲ್ಲಿ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ದಿನಕ್ಕೊಂದು ಹಗರಣಗಳು ಬೆಳಕಿಗೆ ಬರುತ್ತಿವೆ ಎಂದರು.

ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ವೈ.ಎಂ. ಸತೀಶ್, ಕೆ.ಎಸ್. ನವೀನ್, ಮುಖಂಡರಾದ ಶ್ರೀರಾಮುಲು, ಸುನಿಲ್‌ಕುಮಾರ್ ಸೇರಿದಂತೆ ಪಕ್ಷದ ಹಲವು ಮಾಜಿ ಸಚಿವರು, ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಮುಂಬರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಂಗಾರು ಹನುಮಂತು, ನಾನು ಟಿಕೇಟ್ ಆಕಾಂಕ್ಷಿಯಲ್ಲ. ಪಕ್ಷ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಪಕ್ಷ ಯಾರಿಗೆ ಟಿಕೇಟ್ ನೀಡಿದರೂ, ಅವರನ್ನು ಎಲ್ಲರೂ ಒಟ್ಟಾಗಿ ಗೆಲ್ಲಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಬಳೇಶ್, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವಿಜಯಲಕ್ಷ್ಮಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಎನ್.ರಾಮಕೃಷ್ಣ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಪ್ರಧಾನ ಕಾರ್ಯದರ್ಶಿ ಉಡೇದ್ ಸುರೇಶ್, ಸೋಮನಗೌಡ, ಸಂಡೂರು ಮಂಡಲ ಅಧ್ಯಕ್ಷ ನಾನಾ ಸಾಹೇಬ್ ನಿಕ್ಕಂ, ಎಸ್.ಟಿ. ಮೋರ್ಚಾ ಸಂಡೂರು ಮಂಡಲ ಅಧ್ಯಕ್ಷ ಪರಶುರಾಮ್ ಪೂಜಾರ್, ಪ್ರಧಾನ ಕಾರ್ಯದರ್ಶಿ ಆರ್.ಟಿ. ರಘುನಾಥ, ವಿವಿಧ ಮುಖಂಡರು ಉಪಸ್ಥಿತರಿದ್ದರು.