ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಪುರಾತನ ಕಾಲದಾಗಿದ್ದು, ಕೂಡಲೇ ಅವುಗಳನ್ನು ಬದಲಾವಣೆ ಮಾಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಒತ್ತಾಯಿಸಿದರು.

ಕೊಪ್ಪಳ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಒತ್ತಾಯಿಸಿದರು.

ಶಿಕ್ಷಕರ ಸಂಘದವರ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಕಪ್ಪುಬಟ್ಟೆ ಕಟ್ಟಿಕೊಂಡು ಕೆಲಸ ಮಾಡುವ ಅಂಗವಾಗಿ, ಓದು ಕರ್ನಾಟಕ ತರಬೇತಿ ಪ್ರಾರಂಭದ ಪೂರ್ವದಲ್ಲಿ ಹಮ್ಮಿಕೊಂಡಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಪುರಾತನ ಕಾಲದಾಗಿದ್ದು, ಕೂಡಲೇ ಅವುಗಳನ್ನು ಬದಲಾವಣೆ ಮಾಡುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಕಾರ್ಯವಾಗಬೇಕು ಎಂದು ಹೇಳಿದರು.

ಸೇವಾನಿರತ ಶಿಕ್ಷಕರಿಗೆ ಕಡ್ಡಾಯವಾಗಿ ಟಿಇಟಿ ಪಾಸಾಗಬೇಕು ಎಂಬ ನಿಯಮ ಕೈಬಿಡಬೇಕು. ಪದವಿ ಪಡೆದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಶಿಕ್ಷಕರನ್ನು ಕಾಯಂ ಮಾಡಬೇಕು ಎಂಬ ಬೇಡಿಕೆಗಳು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸಿ ಈಡೇರಿಸುವ ಮೂಲಕ ಶಿಕ್ಷಕರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಬೀರಪ್ಪ ಅಂಡಗಿ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರ ಸಂಘದ ಕರೆಯ ಮೇರೆಗೆ ಕಪ್ಪುಬಟ್ಟೆಯನ್ನು ಕಟ್ಟಿಕೊಂಡು ಎಲ್ಲ ಶಿಕ್ಷಕರು ಓದು ಕರ್ನಾಟಕ ತರಬೇತಿಯಲ್ಲಿ ಭಾಗಿಯಾಗಿದ್ದಾರೆ. 2006 ಏ. 1ರ ಆನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಮರಣ ಶಾಸನವಾಗಿರುವ ಎನ್‌ಪಿಎಸ್‌ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಅಲ್ಲದೇ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತಿಯಾಗಬೇಕು ಎಂದು ಹೇಳಿದರು.

ಈ ಸಮಯದಲ್ಲಿ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಸವರಾಜ ಜೀರ, ಶ್ರೀಪತಿ ಹಳ್ಳಿಕೇರಿ, ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪೂರ್ಣಿಮಾ ಪಟ್ಟಣಶೆಟ್ಟಿ, ನಾಗರಾಜ ಎಚ್. ಹಾಜರಿದ್ದರು.