ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತರಬೇಕೆಂದು ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಗದಗ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತರಬೇಕೆಂದು ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಎಸ್ಸಿ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ 7 ಕ್ಕೆ ಹೆಚ್ಚಿಸಿದ್ದ 2022ರ ಅಧಿಸೂಚನೆಯನ್ನು ನ್ಯಾಯಾಲಯ ಅನೂರ್ಜಿತಗೊಳಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ ಅನುಭವಿ ಹಿರಿಯ ವಕೀಲರ ಮೂಲಕ ತುರ್ತು ಕಾನೂನು ಹೋರಾಟ ನಡೆಸಬೇಕು. ಇದೇ ವೇಳೆ ರಾಜ್ಯದ 50ಕ್ಕೂ ಹೆಚ್ಚು ಬುಡಕಟ್ಟುಗಳ ಸಂಸ್ಕೃತಿ ಮತ್ತು ಅಧ್ಯಯನಕ್ಕಾಗಿ ಸುಸಜ್ಜಿತ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಬೇಕು.
ನಾಯಕ (ತಳವಾರ) ಹಾಗೂ ಗೊಂಡ ಸಮುದಾಯಗಳ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಇತರ ಜಾತಿಯವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದು ಹೆಚ್ಚಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಈ ಅಕ್ರಮದಿಂದಾಗಿ ಅರ್ಹ ಪರಿಶಿಷ್ಟ ಪಂಗಡದವರು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಕೇವಲ ನೈಜ ಅರ್ಹರಿಗೆ ಮಾತ್ರ ಎಸ್ಟಿ ಮತ್ತು ಸಿಂಧುತ್ವ ಪ್ರಮಾಣ ಪತ್ರ ವಿತರಿಸುವಂತೆ ಎಲ್ಲಾ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.ಮನವಿ ಸಲ್ಲಿಸುವ ಪೂರ್ವ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿಯೂ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡೇ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.