ಕನ್ನಡಪ್ರಭ ವಾರ್ತೆ ಹಲಗೂರು

ಸಾರ್ವಜನಿಕ ಆಸ್ಪತ್ರೆಗೆ 24 ಗಂಟೆಯೂ ವೈದ್ಯರ ಸೇವೆ, ಆಸ್ಪತ್ರೆ ಉನ್ನತೀಕರಿಣ, ಮುತ್ತತ್ತಿ ಪ್ರವಾಸಿ ತಾಣದಲ್ಲಿ ಸುರಕ್ಷತಾ ಕ್ರಮಗಳು ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್ ರಾಜ್ ಮಾತನಾಡಿ, ಹಲಗೂರು ಹೋಬಳಿ ಸೇರಿ ಸುತ್ತಮುತ್ತಲಿನ ನೂರಾರು ಗ್ರಾಮಗಳ ಸಾವಿರಾರು ಜನರು ಆರೋಗ್ಯ ಸೇವೆಗಾಗಿ ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವಲಂಬಿಸಿಕೊಂಡಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ 24 ಗಂಟೆಗಳ ವೈದ್ಯರ ಸೇವೆ ಲಭ್ಯವಿಲ್ಲ. ತುರ್ತು ಸಂದರ್ಭಗಳಲ್ಲಿ ರೋಗಿಗಳು ಮಂಡ್ಯ, ಮಳವಳ್ಳಿ, ಕನಕಪುರ ಹಾಗೂ ಮೈಸೂರು ನಗರಗಳಿಗೆ ತೆರಳಬೇಕಾದ ದುಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುತ್ತತ್ತಿ ಪ್ರವಾಸಿ ತಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ದಿನವೂ ಅಪಘಾತಗಳು, ಹೃದಯಾಘಾತ, ಹೆರಿಗೆ ಸೇರಿದಂತೆ ತುರ್ತು ಆರೋಗ್ಯ ಸಮಸ್ಯೆಗಳು ಸಂಭವಿಸುವ ಸಾಧ್ಯತೆ ಇದೆ. ಈ ವೇಳೆ ವೈದ್ಯರು ಲಭ್ಯವಿಲ್ಲದಿರುವುದು ಜನರ ಜೀವದೊಂದಿಗೆ ಆಟವಾಡಿದಂತಾಗಿದೆ ಎಂದು ಕಿಡಿಕಾರಿದರು.

ಗ್ರಾಮೀಣ ಬಡವರು, ಕೃಷಿ ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಜೀವನಾಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಇನ್ನಷ್ಟು ಬಲಪಡಿಸಬೇಕು. ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷಕ್ಕೆ 200 ದಿನ ಉದ್ಯೋಗ ಹಾಗೂ ದಿನಕ್ಕೆ 600 ರು. ಕೂಲಿ ನೀಡಬೇಕು. ಯೋಜನೆಯಲ್ಲಿ ಖಾಸಗೀಕರಣ ಹಾಗೂ ಗುತ್ತಿಗೆ ಪದ್ಧತಿಗಳನ್ನು ಜಾರಿಗೊಳಿಸುವುದರಿಂದ ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.


ಮುತ್ತತ್ತಿ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಕ್ರಮಗಳು ಇಲ್ಲದಿರುವುದರಿಂದ ಪ್ರತಿವರ್ಷ ಅನೇಕರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದಾರೆ. ಅಪಾಯದ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳು, ರಕ್ಷಣಾ ಸಿಬ್ಬಂದಿ, ಜೀವ ರಕ್ಷಕ ಸಾಧನಗಳು, ಸಿಸಿಟಿವಿ, ಪ್ರಥಮ ಚಿಕಿತ್ಸೆ ಕೇಂದ್ರ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಸೇರಿದಂತೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಎಂ.ಇ.ಮಹಾದೇವು, ತಾಲೂಕು ಕಾರ್ಯದರ್ಶಿ ಗುರುಸ್ವಾಮಿ, ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ, ಜಿಲ್ಲಾ ಕಾರ್ಯದರ್ಶಿ ಸುಶೀಲಾ, ಉಪಾಧ್ಯಕ್ಷೆ ಪ್ರಮೀಳಾ, ಎಸ್.ಕೆ. ಶಿವಕುಮಾರ್, ಗಣೇಶ್, ಎ.ಎಲ್. ಶಿವಕುಮಾರ್, ಮಹಾದೇವು, ಪ್ರದೀಪ್, ಸಣ್ಣಶೆಟ್ಟಿ, ಸುನಂದಾ, ಜ್ಯೋತಿ, ಶಾಂಭವಿ, ಮಹಾದೇವಮ್ಮ, ನಾಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.