ಸಾರಾಂಶ
ಹಳಿಯಾಳ: ರಾಜ್ಯ ಸರ್ಕಾರ 7ನೇ ವೇತನ ಆಯೋಗದ ವರದಿ ಸೇರಿದಂತೆ ಹಳೆ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸಬೇಕು ಮತ್ತು ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಟಾನಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಹಳಿಯಾಳ ತಾಲೂಕು ಘಟಕವು ಸರ್ಕಾರವನ್ನು ಆಗ್ರಹಿಸಿದೆ.
ಶನಿವಾರ ನೌಕರರ ಸಂಘದ ಹಳಿಯಾಳ ತಾಲೂಕು ಘಟಕದ ಪದಾಧಿಕಾರಿಗಳ ನಿಯೋಗವು ಪಟ್ಟಣದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಆರ್.ವಿ. ದೇಶಪಾಂಡೆಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ, ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಬೇಡಿಕೆಗಳು:ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರ ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿ ಪಡೆದು ಈಗಾಗಲೇ ನೀಡಿರುವ 17% ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40% ಫಿಟ್ಮೆಂಟ್ ಸೌಲಭ್ಯ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕೊಳ್ಳಪಡುವ ನೌಕರರಿಗೆ ದಿ 1-7-2022ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು
ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಿ. ರಾಜ್ಯದ ಎನ್.ಪಿ.ಎಸ್ ನೌಕರರ ವೇತನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಹಾಗೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಭಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್)ಯನ್ನು ಕೂಡಲೇ ಜಾರಿಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಹಳಿಯಾಳ ತಾಲೂಕು ಘಟಕದ ಅಧ್ಯಕ್ಷ ಪ್ರಶಾಂತ ನಾಯಕ ಅವರ ಮುಂದಾಳತ್ವದಲ್ಲಿ ಎನ್.ಪಿ.ಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಪೂಜಾರಿ, ತಾಲೂಕಾಧ್ಯಕ್ಷ ರಮೇಶ ಪೂಜಾರಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಝಾಕೀರ ಜಂಗೂಬಾಯಿ, ಪದಾಧಿಕಾರಿಗಳಾದ ಸುನೀಲ ಗಾಂವಕರ, ನಪೂನಂ ಗಾಂವಕರ, ಭಾರತಿ ನಲವಡೆ, ಅಜಿತ್ ನಾಗರಕಟ್ಟೆ, ಗಣಪತಿ ರೇವಣಕರ, ಈರಯ್ಯ ಮಠಪತಿ, ಪಾವ್ಲ ಮಂಡಲ, ಪರಶುರಾಮ ಶಿಂದೆ, ಜಗದೀಶ ಜುಟ್ಟಲ್, ಶಶಿಧರ ಬುಳ್ಳಾ ಸೇರಿದಂತೆ ಹಲವರು ಇದ್ದರು.