ಸಾಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ

| Published : Oct 06 2025, 01:00 AM IST

ಸಾರಾಂಶ

ಚಳ್ಳಕೆರೆ ತಾಲೂಕಿನ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಸಾಮೆಗೆ ಪ್ರೋತ್ಸಾಹ ಧನ ಬಿಡುಗಡೆಮಾಡಬೇಕೆಂದು ಒತ್ತಾಯಿಸಿ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥಗೆ ಮನವಿ ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ತಾಲೂಕಿನಾದ್ಯಂತ ಸಿರಿಧಾನ್ಯಗಳಲ್ಲಿ ಒಂದಾದ ಸಾಮೆ ಬೆಳೆಯನ್ನು ಸಾಕಷ್ಟು ಸಂಖ್ಯೆಯಲ್ಲಿ ಬೆಳೆದಿದ್ದು, ಅವುಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಂಡು ಪ್ರಚಾರ ನಡೆಸಿದ್ದು ಕೂಡಲೇ ತಾಲೂಕಿನ ಸಾಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರಿಗೆ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಮನವಿ ಮಾಡಿದೆ.

ಸಂಘದ ಅಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಸಿ.ಶಿವಲಿಂಗಪ್ಪ, ನಿರ್ದೇಶಕ ಸಿದ್ದೇಶ್ವರರೆಡ್ಡಿ ಮನವಿ ಸಲ್ಲಿಸಿ ಮಾತನಾಡಿ, ಸರ್ಕಾರ ಈಗಾಗಲೇ ಸಿರಿಧಾನ್ಯಗಳಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆ ಸಕರಾತ್ಮಕ ನಿರ್ಧಾರ ಕೈಗೊಂಡಿದೆ. ಈಗಾಗಲೇ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಸಿರಿಧಾನ್ಯಗಳ ಬೆಳೆಗಾರರಿಗೆ ಪ್ರೋತ್ಸಾಹ ಧನವನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯೋನ್ಮುಖವಾಗಬೇಕೆಂದರು ಮನವಿ ಮಾಡಿದರು.

ಒಂದು ಹೆಕ್ಟೇರ್‌ಗೆ 10 ಸಾವಿರ ರು.ಸಹಾಯ ಧನ ನೀಡಲು ಸರ್ಕಾರ ಘೋಷಣೆ ಮಾಡಿದೆ. ಕೂಡಲೇ ಸಾಮೆ ಬೆಳೆಗಾರರಿಗೆ ಪ್ರೋತ್ಸಾಹದ ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಜಂಟಿಕೃಷಿ ನಿರ್ದೇಶಕ ಡಾ.ಬಿ.ಮಂಜುನಾಥ, ತಮ್ಮಮನವಿಯನ್ನು ಹಿರಿಯ ಅಧಿಕಾರಿಗಳಿಗೆ ಮುಂದಿನ ಆದೇಶಕ್ಕೆ ಕಳಿಸುವ ಭರವಸೆ ನೀಡಿದರು. ಸರ್ಕಾರದಿಂದ ಆದೇಶ ಬಂದಕೂಡಲೇ ಪ್ರೋತ್ಸಾಹ ಧನ ವಿತರಣೆ ಮಾಡಲಾಗುವುದು ಎಂದರು.