ಕಳೆದ ಮೂರೂವರೆ ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಿ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗುತ್ತಿಗೆದಾರರು ಸಾಲ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬಿಲ್ ಪಾವತಿಯಾಗದ ಕಾರಣ ಸಾಲದ ಮೇಲಿನ ಬಡ್ಡಿ ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಜೆಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿ ನಡೆಯುತ್ತಿರುವ ಕಾಮಗಾರಿಗಳ ಸುಮಾರು 1 ಸಾವಿರ ಕೋಟಿ ರು.ಗೂ ಅಧಿಕ ಮೊತ್ತದ ಬಿಲ್ ಬಾಕಿ ಉಳಿದಿದೆ. ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಜಿಲ್ಲಾ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.ಸಂಘದ ಅಧ್ಯಕ್ಷ ಎಂ.ಎಚ್.ಯತಿರಾಜು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಗುತ್ತಿಗೆದಾರರು, ಜಿಲ್ಲೆಯ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.
ಕಳೆದ ಮೂರೂವರೆ ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಿ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗುತ್ತಿಗೆದಾರರು ಸಾಲ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬಿಲ್ ಪಾವತಿಯಾಗದ ಕಾರಣ ಸಾಲದ ಮೇಲಿನ ಬಡ್ಡಿ ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿದಿನ ಹಲವು ಗುತ್ತಿಗೆದಾರರು ಸಂಘದ ಕಚೇರಿಗೆ ಆಗಮಿಸಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.ಸಚಿವರು ಈ ಹಿಂದೆ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವುದರಿಂದ ಗುತ್ತಿಗೆದಾರರ ಸಂಕಷ್ಟವನ್ನು ಅರಿತು ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಮನವಿ ಮಾಡಿದರು.
ಪ್ಯಾಕೇಜ್ ಟೆಂಡರ್ ಪದ್ಧತಿ ರದ್ದುಗೊಳಿಸಬೇಕು. 5 ಲಕ್ಷದಿಂದ 50 ಲಕ್ಷ ರು.ವರೆಗಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ್ಲಾಸ್-2 ಮತ್ತು ಕ್ಲಾಸ್-3 ಗುತ್ತಿಗೆದಾರರಿಗೆ ಕಳೆದ ಮೂರೂವರೆ ವರ್ಷಗಳಿಂದ ಟೆಂಡರ್ ಅವಕಾಶ ದೊರೆಯದಿರುವ ಸಮಸ್ಯೆ ಪರಿಹರಿಸಬೇಕು. ಮಂಡ್ಯ ಜಿಲ್ಲೆಯ ಏಳು ವಿಭಾಗೀಯ ಕಚೇರಿಗಳಲ್ಲಿ ಟೆಂಡರ್ ಕರೆದು ಸ್ಥಳೀಯ ಗುತ್ತಿಗೆದಾರರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಎಲ್.ಒಸಿ ಹಣ ಬಿಡುಗಡೆ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ನಿವಾರಿಸಬೇಕು. ಪ್ರಭಾವಿಗಳಿಗೆ ಮಾತ್ರ ಬಿಲ್ ಪಾವತಿಯಾಗುತ್ತಿದೆ. ಸಣ್ಣ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ದೊರೆಯುತ್ತಿಲ್ಲ. ಇದನ್ನು ತಪ್ಪಿಸಬೇಕು. ನೀರಾವರಿ, ಲೋಕೋಪಯೋಗಿ, ಸಣ್ಣ ನೀರಾವರಿ ಹಾಗೂ ಜಿಪಂ ಎಂಜಿನಿಯರಿಂಗ್ ವಿಭಾಗಗಳಲ್ಲಿ ತುರ್ತಾಗಿ ಎಲ್ಒಸಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಪದಾಧಿಕಾರಿಗಳನ್ನು ತುರ್ತಾಗಿ ಸಭೆಗೆ ಆಹ್ವಾನಿಸಿ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗುತ್ತಿಗೆದಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ವಿವಿಧ ಇಲಾಖೆಗಳಲ್ಲಿ ನಿರ್ವಹಿಸಿರುವ ಕಾಮಗಾರಿಗಳ ಬಾಕಿ ಹಣ ಬಿಡುಗಡೆಗೊಳಿಸಲು ಕ್ರಮ ವಹಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರವೀಂದ್ರ, ಸಹ ಕಾರ್ಯದರ್ಶಿ ಕೆ.ಪಿ.ಸುನೀಲ್ಬಾಬು, ಖಜಾಂಚಿ ನವೀನ್ ಕುಮಾರ್, ನಿರ್ದೇಶಕರಾದ ಚನ್ನೇಗೌಡ, ಎಲ್.ಎನ್.ನಂಜುಂಡಪ್ಪ, ಶ್ರೀನಿದಿ, ಶಶಿಧರ್, ಪುಟ್ಟಲಿಂಗೇಗೌಡ ಇತರರಿದ್ದರು.