ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಚಿಂತನೆ ಹಾಗೂ ವಚನ ಪರಂಪರೆಯನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ವೀರಶೈವ ಲಿಂಗಾಯತ ಮಹಾಸಭೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಮಹಾನ್ ಚೇತನದ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದು ಕೋಟ್ಯಂತರ ಬಸವಾನುಯಾಯಿಗಳ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಸಮಾಜದಲ್ಲಿ ಅನಗತ್ಯ ಗೊಂದಲ ಮತ್ತು ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಚಿಂತನೆ ಹಾಗೂ ವಚನ ಪರಂಪರೆಯನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ವೀರಶೈವ ಲಿಂಗಾಯತ ಮಹಾಸಭೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ನಗರದಲ್ಲಿ ಪ್ರತಿಭಟನೆ ನಡೆಸಿದ ಮಹಾಸಭೆಯ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ರವಿ ಹಂಜಿ ಅವರು ರಚಿಸಿರುವ ’ಬಸವ ಮಂಟಪ’ ಕೃತಿಯಲ್ಲಿ ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ಕೂಡಲೇ ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಹೇಳಿಕೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಪುನೀತ್ ಪಟೇಲ್ ಮಾತನಾಡಿ, ಬಸವಣ್ಣನವರು ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯ ಮೌಲ್ಯಗಳ ಮೂಲಕ ವಿಶ್ವಕ್ಕೆ ಹೊಸ ದಿಕ್ಕು ತೋರಿದ ಮಹಾನ್ ಸಮಾಜ ಸುಧಾರಕರು. ಇಂತಹ ಮಹಾನ್ ಚೇತನದ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದು ಕೋಟ್ಯಂತರ ಬಸವಾನುಯಾಯಿಗಳ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಸಮಾಜದಲ್ಲಿ ಅನಗತ್ಯ ಗೊಂದಲ ಮತ್ತು ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದರು. ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು ಧಾರ್ಮಿಕ ಹಾಗೂ ಐತಿಹಾಸಿಕ ವ್ಯಕ್ತಿತ್ವಗಳಿಗೆ ಅಪಮಾನ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ಸಂಶೋಧನೆಯ ಹೆಸರಿನಲ್ಲಿ ಸತ್ಯಾಸತ್ಯತೆ ಪರಿಶೀಲಿಸದೆ ಇಂತಹ ಹೇಳಿಕೆಗಳನ್ನು ನೀಡುವುದು ಮತ್ತು ಬರಹಗಳನ್ನು ಪ್ರಕಟಿಸುವುದು ಸರಿಯಾದ ಕ್ರಮವಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಕಟ್ಟಾಯ ಶಿವಕುಮಾರ್, ಪುನೀತ್ ಪಟೇಲ್, ಹೇಮೇಶ್, ಬಿ.ಎಂ. ಭುವನಾಕ್ಷ, ಮದನ್ ಯು. ಎಸ್., ಬಸವರಾಜ್, ಸೋಮಶೇಖರ್‌, ಮಮತಾ ಪಾಟೀಲ್, ಜಯಲಕ್ಷ್ಮಮ್ಮ, ಸಾವಿತ್ರಮ್ಮ, ಎಚ್. ಎಸ್. ರೋಹಿತ್, ಉಮೇಶ್, ಅವಿನಾಶ್, ಮಧು, ಕೀರ್ತಿಕುಮಾರ್‌, ರಾಜಶೇಖರ್‌, ಮೂರ್ತಿ, ಶೋಭನ್ ಬಾಬು, ದರ್ಶನ್, ನಾಗೇಶ್, ಜ್ಯೋತಿ, ಗಣೇಶ್, ಚಾಂದಿನಿ, ಎನ್. ಆನಂದ್, ಉದಯಕುಮಾರ್, ಮಂಜು, ವಿಜಯಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.