ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಳೆಯ ಪಿಂಚಣಿ ಯೋಜನೆ ಜಾರಿ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಡಳಿತ ಮಂಡಳಿ ಹಾಗೂ ನೌಕರರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಹಾವೇರಿ: ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಳೆಯ ಪಿಂಚಣಿ ಯೋಜನೆ ಜಾರಿ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಡಳಿತ ಮಂಡಳಿ ಹಾಗೂ ನೌಕರರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕರೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಈ ಹೋರಾಟಕ್ಕೆ ಹಾವೇರಿ ಜಿಲ್ಲೆಯಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಗುರುವಾರ ಪ್ರತಿಭಟನಾಕಾರರು ತಹಸೀಲ್ದಾರ್ ಕಚೇರಿಗೆ ತೆರಳಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಮನವಿ ಸಲ್ಲಿಸಿದರು. ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದರೆ ಶುಕ್ರವಾರದಿಂದ ತಹಸೀಲ್ದಾರ್ ಕಚೇರಿ ಎದುರು ಧರಣಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ನ್ಯಾಯಾಲಯದ ಆದೇಶದಂತೆ ಕಾಲ್ಪನಿಕ ವೇತನದ ಸೌಲಭ್ಯ ಒದಗಿಸಬೇಕು. 2015ರಿಂದ ಅನುದಾನಿತ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಉಳಿದಿರುವ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳ ಭರ್ತಿಗೆ ಅನುಮತಿ ನೀಡಬೇಕು. ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.
ಶೈಕ್ಷಣಿಕ ಚಟುವಟಿಕೆಗಳಿಗೆ ಹೊಡೆತ: ನೌಕರರ ಪ್ರತಿಭಟನೆಯಿಂದ ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ. ಜಿಲ್ಲೆಯ 160 ಪ್ರೌಢಶಾಲೆಗಳು, 69 ಪ್ರಾಥಮಿಕ ಶಾಲೆಗಳು ಹಾಗೂ 40 ಕಾಲೇಜುಗಳು ತಮ್ಮ ದೈನಂದಿನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಇದರಿಂದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗಿದೆ.ಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಬೇಡಿಕೆಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದಿರುವುದು ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ಇನ್ನು ವಿಳಂಬ ಮಾಡದೆ ಆಡಳಿತ ಮಂಡಳಿ ಹಾಗೂ ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಎಚ್. ಬೆಟ್ಟಳ್ಳೇರ, ಕಾರ್ಯದರ್ಶಿ ಎನ್.ಎನ್. ಕುಂದೂರ ಹಾಗೂ ಎಚ್.ಪಿ. ಬಣಕಾರ ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಎಂ.ಬಿ. ರಮೇಶ, ಸಿ.ಎಸ್. ಮರಳಿಹಳ್ಳಿ, ಎಸ್.ಎಸ್. ಹೊಸಗೌಡ, ಬಿ.ವಿ. ಕೋರಿ, ಎಸ್.ಡಿ. ಪರಡ್ಡಿ, ಎಸ್.ಎನ್. ಮಳೆಪ್ಪನವರ, ಎಂ.ಜಿ. ಹಿರೇಮಠ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.