ಮತದಾರರ ಹಕ್ಕುಗಳ ರಕ್ಷಣೆಗಾಗಿ, ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಹಾವೇರಿ: ಮತದಾರರ ಹಕ್ಕುಗಳ ರಕ್ಷಣೆಗಾಗಿ, ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ವೋಟ್ ಬಚಾವೋ, ದೇಶ ಬಚಾವೋ ಹೆಸರಿನಡಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಕೇಂದ್ರ ಸರ್ಕಾರ ಎಸ್ಐಆರ್ ಪ್ರಕ್ರಿಯೆ ಕೈಬಿಟ್ಟು, ಮತದಾರರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು. ಎನ್ಡಿಎ ಸರ್ಕಾರದ ಕೈಗೊಂಬೆಯಾಗಿರುವ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಇದರ ಭಾಗವಾಗಿ ಮುಂದಿನ ವಾರದಿಂದ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಘಟಕಗಳ ವ್ಯಾಪ್ತಿಯಲ್ಲಿ `ದೇಶ ಬಚಾವೋ, ವೋಟ್ ಬಚಾವೋ'''''''' ಆಂದೋಲನ ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಕಾರ್ಯಕರ್ತರು ಸಜ್ಜಾಗಬೇಕು ಎಂದರು.
ಬರುವ ಡಿಸೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು. ಸಂಘಟನ್ ಸೃಜನ್ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಮಾತನಾಡಿ, ಮತದಾನ ಪ್ರಜಾಪ್ರಭುತ್ವದ ಪ್ರಮುಖ ಹಕ್ಕು. ಪ್ರತಿಯೊಬ್ಬ ಅರ್ಹ ಮತದಾರನಿಗೂ ಮತದಾನದ ಹಕ್ಕು ದೊರೆಯುವಂತಾಗಬೇಕು. ಎಸ್ಐಆರ್ ಹೆಸರಿನಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರ ಪಟ್ಟಿ ಪರಿಶೀಲಿಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು. ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಲು ಸಂಘಟಿತ ಹೋರಾಟ ಅಗತ್ಯ ಎಂದರು.
ಹಾನಗಲ್ಲ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ರಾತ್ರೋರಾತ್ರಿ ಸಾವಿರಾರು ಫಾರ್ಮ್ ನಂ.7 ಅರ್ಜಿಗಳನ್ನು ಹಿಂಪಡೆಯಲಾಗಿದೆ. ಬಿಜೆಪಿಯವರಿಗೆ ಧೈರ್ಯವಿದ್ದರೆ ಯಾವ ಕ್ಷೇತ್ರದಲ್ಲಿ ಎಷ್ಟು ಅರ್ಜಿಗಳನ್ನು ಹಿಂಪಡೆಯಲಾಗಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಸಂಕಷ್ಟದಲ್ಲಿವೆ. ಮತದಾರರ ಹಕ್ಕುಗಳ ರಕ್ಷಣೆಗೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟಿತರಾಗಬೇಕು. ಪಶ್ಚಿಮ ಪದವೀಧರರ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಲ್ಲ. ಮುಂಬರುವ ಜಿಪಂ, ತಾಪಂ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ಚುನಾವಣೆಗಳು ಪಕ್ಷದ ಸಂಘಟನಾ ಶಕ್ತಿಯನ್ನು ನಿರ್ಧರಿಸಲಿವೆ ಎಂದರು.ಪ್ರತಿಭಟನೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮರಗಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಸಂತಾ ಬಾಗೂರು, ಮುಖಂಡರಾದ ಎಂ.ಎಂ. ಹಿರೇಮಠ, ಗುಡ್ಡನಗೌಡ ಅಂದಾನಿಗೌಡ್ರ, ಎಂ.ಎಂ. ಮೈದೂರ, ಹನುಮಂತಪ್ಪ ಬಂಡಿವಡ್ಡರ, ಬಸವರಾಜ ಹೆಡಿಗ್ಗೊಂಡ, ಶಂಕರ ಮೆಹರವಾಡೆ, ಶ್ರೀಧರ್ ದೊಡ್ಡಮನಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.ಸಂವಿಧಾನಬದ್ಧ ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ. ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು, ಮತದಾರರ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಹಾಗೂ ಮತದಾನದ ಹಕ್ಕನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದ ಉಳಿವಿಗಾಗಿ ಹೋರಾಟ ನಿರಂತರವಾಗಿರಬೇಕು. ಜ್ಞಾನೇಶ್ ಕುಮಾರ್, ಅಮಿತ್ ಷಾ ಹಾಗೂ ನರೇಂದ್ರ ಮೋದಿ ಅವರು ಹಂತ ಹಂತವಾಗಿ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಒಂದಲ್ಲ ಒಂದು ದಿನ ಜಯ ಸಿಗಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿಯಬಾರದು ಎಂದು ಶಾಸಕ ಯಾಸೀರ್ಖಾನ್ ಪಠಾಣ್ ಹೇಳಿದರು.ಎಸ್ಐಆರ್ ಹೆಸರಲ್ಲಿ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯಬಾರದು. ಮತದಾರರ ಪಟ್ಟಿಯಲ್ಲಿರುವ ನಕಲಿ ಹಾಗೂ ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅರ್ಹ ಮತದಾರರ ಹೆಸರುಗಳನ್ನು ಕೈಬಿಟ್ಟು, ಕಾಂಗ್ರೆಸ್ ಬೆಂಬಲಿಗರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮತದಾನದ ಹಕ್ಕಿಗೆ ಯಾವುದೇ ಧಕ್ಕೆಯಾಗಬಾರದು. ಜ್ಞಾನೇಶಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದರ್ಶನ್ಕುಮಾರ ಲಮಾಣಿ ಹೇಳಿದರು.