ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಹಾಗೂ ಎಇಇ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವಂತೆ ಒತ್ತಾಯಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ಜೈಭೀಮ್ ಬ್ರಿಗೇಡ್ ಸಮಿತಿಯಿಂದ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಹಾಗೂ ಎಇಇ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವಂತೆ ಒತ್ತಾಯಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ಜೈಭೀಮ್ ಬ್ರಿಗೇಡ್ ಸಮಿತಿಯಿಂದ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಲು ಹಗಲಿರುಳು ಶ್ರಮಿಸಿ ನೀಟ್ ಹಾಗೂ ಎಇಇ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ಅವರ ಪರಿಶ್ರಮಕ್ಕೆ ಧಕ್ಕೆ ತಂದು, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಿವೆ. ಇಂತಹ ಘಟನೆಗಳಿಂದ ಅನೇಕ ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾಗಿರುವುದು ಕಳವಳಕಾರಿ ಎಂದರು. ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ನೈತಿಕ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವರು ಹೊತ್ತುಕೊಳ್ಳಬೇಕು. ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು. ಇದೇ ಬೇಡಿಕೆಯನ್ನು ಮುಂದಿಟ್ಟು ಲಡಾಖ್‌ನ ವಿಜ್ಞಾನಿ, ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ಪ್ರೇಮಿ ಸೋನಮ್ ವಾಂಚುಕ್ ದೆಹಲಿಯ ಜಂತರ್-ಮಂತರ್‌ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಯುತ ಪರೀಕ್ಷಾ ವ್ಯವಸ್ಥೆಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಬೇಕಿದೆ ಎಂದು ಎಂದು ಕೋರಿದರು.ಪ್ರತಿಭಟನೆಯಲ್ಲಿ ಜೈಭೀಮ್ ಬ್ರಿಗೇಡ್ ಸಮಿತಿಯ ಪ್ರಸಾದ್, ಪುನಿತ್, ಮಧು, ಲೋಕೇಶ್, ಇಮ್ರಾನ್, ಶಂಕರ್, ರಂಗನಾಥ್, ಚಿಗಣ್ಣ ಇತರರು ಉಪಸ್ಥಿತರಿದ್ದರು.