ಕನ್ನಡಪ್ರಭ ವಾರ್ತೆ ಮಂಡ್ಯ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, ದೆಹಲಿಯಲ್ಲಿ ಪ್ರತಿಭಟನೆ ಹತ್ತಿಕ್ಕಲು ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಯುವ ಕಾಂಗ್ರೆಸ್ ಕಾರ್‍ಯಕರ್ತರು ಕಾಲೇಜು ವಿದ್ಯಾರ್ಥಿಗಳೊಂದಿಗೆ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ನಗರದ ನಂದಾ ಚಿತ್ರಮಂದಿರದ ಬಳಿ ಸೇರಿದ ಯುವ ಕಾಂಗ್ರೆಸ್ ಕಾರ್‍ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಬೆಂಗಳೂರು - ಮೈಸೂರು ಹೆದ್ದಾರಿ ಮಾರ್ಗವಾಗಿ ಜಯಚಾಮರಾಜ ಒಡೆಯರ್ ವೃತ್ತಕ್ಕೆ ಮೆರವಣಿಗೆಯಲ್ಲಿ ಆಗಮಿಸಿ ಧರಣಿ ಕುಳಿತರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಪಿ.ರವಿಕುಮಾರ್ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕನಿಕರ ಇಲ್ಲವಾಗಿದೆ. ಶೋಕಿ ಮಾಡುವುದನ್ನು ಬಿಟ್ಟು ವಿದ್ಯಾರ್ಥಿಗಳನ್ನು ಉಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ಬಿಜೆಪಿಯವರು ಕೋಟ್ಯಾಂತರ ದುಡ್ಡು ಹೊಡೆಯಲು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಪರ ನಿಂತ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನು ಬಂಧಿಸಿದ್ದಾರೆ. ಕೇಂದ್ರ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳ ಬಾಳು ಕತ್ತಲಾಗಿದೆ. ವಿದ್ಯಾರ್ಥಿ ವಿರೋಧಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೆ ಕಾಂಗ್ರೆಸ್ ನಿಮ್ಮ ಪರ ಇರುತ್ತದೆ ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ, ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.-------------
22ಕೆಎಂಎನ್ ಡಿ11ಮಂಡ್ಯದಲ್ಲಿ ಯುವ ಕಾಂಗ್ರೆಸ್ ಕಾರ್‍ಯಕರ್ತರು ಕಾಲೇಜು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದರು.