Demand for Union Minister Dharmendra Pradhan's resignation

-ತಹಸೀಲ್ದಾರ್ ಸರಕಾವಸ್‌ ಮೂಲಕ ರಾಷ್ಟ್ರಪತಿಗೆ ಮನವಿ

-----

ಕನ್ನಡಪ್ರಭ ವಾರ್ತೆ ಸುರಪುರ

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕೆಂದು ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ಆಗ್ರಹಿಸಿತು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಮುಖಂಡ ಮಾನು ಗುರಿಕಾರ, ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮಾಧ್ಯಮ ಕ್ಷೇತ್ರಗಳು ವ್ಯಾಪಾರೀಕರಣದತ್ತ ಸಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಸಿಬ್ಬಂದಿಯೂ ಮಾನವೀಯತೆ ಪ್ರದರ್ಶಿಸಬೇಕು. ತಮ್ಮ ಮಕ್ಕಳ ಉನ್ನತ ಹಾಗೂ ತಾಂತ್ರಿಕ ಶಿಕ್ಷಣದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ ಅವರು, ವಿದ್ಯಾರ್ಥಿಗಳು ಮೂಢನಂಬಿಕೆಗಳನ್ನು ತೊರೆದು ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದ ಘಟನೆಗಳಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಪ್ರತಿ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಬೇಕು. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿದ ಪ್ರತಿಭಟನಾಕಾರರು, ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ರಾಜ್ಯ ಸಂಚಾಲಕ ಭೀಮರಾಯ ಸಿಂದಗೇರಿ, ವಿಭಾಗೀಯ ಸಂಚಾಲಕ ಮಾನಪ್ಪ ಕಟ್ಟಿಮನಿ, ಮಾನಪ್ಪ ಬಳಬಟ್ಟಿ, ಖಾಜಾಹುಸೇನ ಗುಡಗುಂಟಿ, ಶರಣಪ್ಪ ನಗನೂರು, ಆನಂದ ಕಟ್ಟಿಮನಿ, ಮೂರ್ತಿ ಬೊಮ್ಮನಹಳ್ಳಿ, ಚಂದ್ರಶೇಖರ ಕಟ್ಟಿಮನಿ, ಸಿದ್ದಪ್ಪ ಸುರಪುರಕರ್, ಡಾ. ಗಾಳೆಪ್ಪ ಪೂಜಾರಿ, ಮಲ್ಲಯ್ಯ ಕಮತಗಿ, ಮಹಾದೇವಪ್ಪ ಬಿಜಾಪೂರ, ಮಲ್ಲು ಕುಂಬಾರಪೇಟೆ ಇದ್ದರು.

------

ಫೋಟೋ:

ಸುರಪುರದ ಮಹಾತ್ಮ ಗಾಂಧಿ ವೃತ್ತದಲ್ಲಿ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಮುಖಂಡರು ಹಾಗೂ ವಿದ್ಯಾರ್ಥಿಗಳು ತಹಸೀಲ್ದಾರ್ ಎಚ್.ಎ. ಸರಕಾವಸ್‌ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.