ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವು ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವು ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ಒತ್ತಾಯಿಸಿ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುವ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಇದು ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಈ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ ಎಂದು ಕಿಡಿಕಾರಿದರು.ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಸಂಪೂರ್ಣವಾಗಿ ಅಸ್ಪಷ್ಟವಾಗಿದ್ದು, ಸರಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಯಾವುದೇ ಕಾರಣಕ್ಕೂ ಅಂಗೀಕಾರವಾಗಲು ಬಿಡುವುದಿಲ್ಲ ಎಂದು ಹೇಳಿದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಮಾಡುತ್ತಿದೆ. ಬಿಜೆಪಿ, ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ಧ್ವನಿ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಜಿಲ್ಲಾ ಒ.ಬಿ.ಸಿ ಮೋರ್ಚಾ ಅಧ್ಯಕ್ಷ ಎನ್.ಪಿ. ಚಾವಡಿ, ಶಹರ ಘಟಕದ ಅಧ್ಯಕ್ಷ ಕಿರಣ ಕೊಳ್ಳಿ, ಗ್ರಾಮೀಣ ಮಂಡಲ ಅಧ್ಯಕ್ಷ ಮಾರುತಿ ಗೊರವರ, ಹತ್ತಿಮತ್ತೂರ ಮಂಡಲ ಅಧ್ಯಕ್ಷ ಬಸವರಾಜ ಕೋಳಿವಾಡ, ಸವಣೂರ ಅಧ್ಯಕ್ಷ ಗಂಗಾಧರ ಬಾಣದ ಮಾತನಾಡಿದರು. ಪ್ರತಿಭಟನೆಯಲ್ಲಿ ಸವಣೂರ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ, ಶಿಗ್ಗಾಂವಿ ಅಧ್ಯಕ್ಷ ವಿಶ್ವನಾಥ ಹರವಿ ಇತರರು ಇದ್ದರು.