ಸಾರಾಂಶ
ರಾಮನಗರ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತರಗತಿ ಸುಗಮವಾಗಿ ನಡೆಸುವಂತೆ ಹಾಗೂ ಜಿಲ್ಲೆಯಲ್ಲಿನ ಬಸ್ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಸೇರಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ವಾಹನ ತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಒಂದು ತಿಂಗಳಿನಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಪಠ್ಯ ಚುಟುವಟಿಕೆಗಳು ಮುಗಿದಿಲ್ಲ. ಇನ್ನು ವಿಶ್ವ ವಿದ್ಯಾಲಯವೂ ಪರೀಕ್ಷಾ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ತರಗತಿಯೇ ನಡೆಯದೆಯೇ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರು ಜೀವನ ನಡೆಸುವಂತೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವೂ ಈ ವಿಷಯದಲ್ಲಿ ಯಾವುದೇ ರೀತಿಯ ವಿಳಂಬ ಮಾಡದೆ ಪ್ರತಿ ತಿಂಗಳು ಸರ್ಕಾರಿ ಉಪನ್ಯಾಸಕರಿಗೆ ನೀಡುವಂತೆ ಅತಿಥಿ ಉಪನ್ಯಾಸಕರಿಗೂ ವೇತನ ನೀಡಬೇಕು. ಅದರಲ್ಲೂ ಯುಜಿಸಿ ನಿಯಾಮಾವಳಿಗೆ ತಕ್ಕಂತೆ ವೇತನ ಪಾವತಿ ಮಾಡಬೇಕು. ತರಗತಿಗಳು ಸುಗಮವಾಗಿ ನಡೆಯಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರೆಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿಗಳ ಬಹಿಷ್ಕಾರ ಹಿಂಪಡೆದು ಪಾಠ ಪ್ರವಚನ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ರಾಮನಗರ ಜಿಲ್ಲೆಯಲ್ಲಿ ಬಸ್ ಸಮಸ್ಯೆ ಹೆಚ್ಚಾಗಿದೆ. ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿಸಚಿವರಿಗೂ ಜತೆಗೆ ಮಾತನಾಡಿದ್ದೇವು. ಆದರೂ, ಸಮಸ್ಯೆಗೆ ಈ ತನಕ ಪರಿಹಾರ ಸಿಕ್ಕಿಲ್ಲ. 2023-24ಸಾಲಿನ ವಿದ್ಯಾರ್ಥಿ ವೇತನ ಕಡಿತ ಮಾಡದೆ ಪೂರ್ಣವಾಗಿ ತಕ್ಷಣ ಜಮಾ ಮಾಡಬೇಕು. ಹಾಗೂ ವಿದ್ಯಾರ್ಥಿ ವೇತನಕ್ಕೆ ಸಲ್ಲಿಕೆ ಮಾಡಿದ 4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯ ಸರ್ಕಾರವೂ ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆ ಮಾತುಕತೆ ನಡೆಸಿ ಸಕಾರಾತ್ಮಕವಾಗಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರಾದ ಜ್ಞಾನೇಶ್ ಕುಮಾರ್, ಸುಹಾಸ್, ಭುವನ್, ಸರ್ವೇಶ್, ಮಯೂರ್ , ಪ್ರವೀಣ್, ರಮ್ಯಾ, ಚೈತ್ರಾ, ಪ್ರಮೋದ್ ಮತ್ತಿತರರು ಭಾಗವಹಿಸಿದ್ದರು.26ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ಐಜೂರು ವೃತ್ತದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.