ಸಾರಾಂಶ
ಬೆಳಗಾವಿ : ಹೂಗಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಇರುವ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ದೇವರ ಪೂಜೆ, ಗ್ರಾಮಗಳಲ್ಲಿ ಮನೆ ಮನೆಗೆ ಹೂ ಪತ್ರಿ ನೀಡುವುದು ನಮ್ಮ ಕುಲಕಸುಬು ಆಗಿದ್ದು, ಅದನ್ನು ಮುಂದುವರಿಸಿಕೊಂಡು ಬಂದಿದ್ದೇವೆ. ನಮಗೆ ಯಾವುದೇ ಆರ್ಥಿಕ ಆದಾಯ ಇಲ್ಲ. ಕಾಳು ಕಡಿ ಕೊಟ್ಟಿದ್ದನ್ನು ಪಡೆದುಕೊಂಡೇ ಜೀವನ ಸಾಗಿಸುತ್ತಿದ್ದೇವೆ. ಆದರೆ, ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಹಾಗಾಗಿ, ನಮಗೆ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿದರು.ಸಂಘದ ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಮಾತನಾಡಿ, ನಮ್ಮ ಸಮಾಜದ ವಿದ್ಯಾವಂತ ಯುವಕರಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಸಣ್ಣ ಸಮಾಜ ನಮ್ಮ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಈಚೆಗೆ ಮೂಡಲಗಿ ತಾಲೂಕಿನ ಕಳ್ಳಿಗುದ್ದಿ ಗ್ರಾಮದ ಹನುಮಾನ ದೇವಸ್ಥಾನ ಅರ್ಚಕ ಬಾಳಕೃಷ್ಣ ಹತ್ಯೆ, ಯಾದಗಿರಿ ಜಿಲ್ಲೆಯ ಶಂಕರೆಪ್ಪ ಹೂಗಾರ ಬುದ್ಧಿಮಾಂದ್ಯ ಹತ್ಯೆ ಮಾಡಿ ಸುಟ್ಟು ಹಾಕಿದ್ದು, ಈ ಎರಡೂ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಸಮಸ್ಯೆ ಆಲಿಸಿ ಪರಿಶೀಲಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಸಂಘದ ಗೌರವ ಅಧ್ಯಕ್ಷ ಗುರುದೇವ ಶರಣರು, ರಾಜ್ಯ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಪೂಜಾರ ಸೇರಿ ಮತ್ತಿತರರು ಪಾಲ್ಗೊಂಡಿದ್ದರು.