ಬಿಎಡ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಸ್ತುತ ನಡೆಯುತ್ತಿರುವ ಸರಕಾರಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ತಹಸೀಲ್ದಾರ್ ಮೂಲಕ ಶಿಕ್ಷಣ ಸಚಿವರು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬ್ಯಾಡಗಿ: ಬಿಎಡ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಸ್ತುತ ನಡೆಯುತ್ತಿರುವ ಸರಕಾರಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ತಹಸೀಲ್ದಾರ್ ಮೂಲಕ ಶಿಕ್ಷಣ ಸಚಿವರು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ವಿದ್ಯಾರ್ಥಿ ದುರುಗೇಶ ಹಾವನೂರ, ತಾಲೂಕಿನ ವಿವಿಧ ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಬಿಎಡ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಜೊತೆಗೆ ಈಗಾಗಲೇ ಶಿಕ್ಷಕರ ಅರ್ಹತಾ ಪರೀಕ್ಷೆ (ಖಿಇಖಿ) ಯಲ್ಲಿಯೂ ಅರ್ಹತೆ ಪಡೆದಿದ್ದೇವೆ. ಪ್ರಸ್ತುತ ರಾಜ್ಯ ಸರ್ಕಾರದಿಂದ ಸರ್ಕಾರಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ ಬಿಎಡ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದಿರುವುದರಿಂದ ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ಅಳಲು ತೋಡಿ ಕೊಂಡರು.ನಮಗೂ ಅವಕಾಶ ನೀಡಿ:ಬಸವರಾಜ ಯರೇಶಿಮಿ ಮಾತನಾಡಿ, ಬಿಎಡ್ ಪದವಿ ಪೂರ್ಣಗೊಳಿಸುವ ಹಂತದಲ್ಲಿರುವ ನಾವು ಟಿಇಟಿ ಸೇರಿದಂತೆ ಅಗತ್ಯ ಅರ್ಹತೆಗಳನ್ನು ಹೊಂದಿದ್ದೇವೆ. ಹೀಗಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೆ, ಮುಂದಿನ ದಿನಗಳಲ್ಲಿ ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಈಗಾಗಲೇ ಹಲವು ವರ್ಷಗಳಿಂದ ಶಿಕ್ಷಕರಾಗುವ ಕನಸು ಹೊತ್ತು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸುವ ಅವಕಾಶದಿಂದ ನಮ್ಮನ್ನು ವಂಚಿಸಬಾರದು ಎಂದು ಮನವಿ ಮಾಡಿದರು.
ಸಕಾರಾತ್ಮತ ನಿಧಾರ ತಗೊಳ್ಳಿ: ಶೃತಿ.ಎಸ್.ಮಾತನಾಡಿ, ಸರಕಾರಿ ಶಿಕ್ಷಕರ ನೇಮಕಾತಿ ಪ್ರತಿ ವರ್ಷ ನಡೆಯಲ್ಲ ಎಂಬುದನ್ನು ಸರಕಾರ ಅರಿತುಕೊಂಡು ಖಾಲಿ ಇರುವ ಹುದ್ದೆಗಳನ್ನು ಸಮರ್ಪಕವಾಗಿ ಭರ್ತಿ ಮಾಡುವುದರ ಜೊತೆಗೆ, ಅರ್ಹತೆ ಹೊಂದಿರುವ ಅಂತಿಮ ವರ್ಷದ ಬಿಎಡ್ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸುವ ಮೂಲಕ ಅವರ ಭವಿಷ್ಯಕ್ಕೆ ಸರಕಾರ ಆಸರೆಯಾಗಬೇಕು. ಅಂತಿಮ ವರ್ಷದ ವ್ಯಾಸಂಗ ಪೂರ್ಣಗೊಳಿಸುವ ವಿದ್ಯಾರ್ಥಿಗಳು ನೇಮಕಾತಿಯ ಮುಂದಿನ ಹಂತದ ವೇಳೆಗೆ ಅಗತ್ಯ ಶೈಕ್ಷಣಿಕ ಅರ್ಹತೆ ಪಡೆಯುವ ಸಾಧ್ಯತೆ ಇರುವುದರಿಂದ, ಮಾನವೀಯ ಹಾಗೂ ವಿದ್ಯಾರ್ಥಿ ಸ್ನೇಹಿ ದೃಷ್ಟಿಕೋನದಿಂದ ಸರಕಾರ ಈ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ರಮ್ಯಾ ಎಚ್. ಮಾತನಾಡಿ, ಶಿಕ್ಷಣ ಸಚಿವರು ಹಾಗೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಬಿಎಡ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಪ್ರಸ್ತುತ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಇದರಿಂದ ಶಿಕ್ಷಕರಾಗುವ ಕನಸು ಕಾಣುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗುವುದರ ಜೊತೆಗೆ, ಅವರ ಭವಿಷ್ಯಕ್ಕೂ ಭದ್ರತೆ ದೊರೆಯಲಿದೆ ಎಂದು ವಿದ್ಯಾರ್ಥಿಗಳು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಬಿಎಡ್ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.