ಸಾರಾಂಶ
ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿರುವ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಮೊಳಕಾಲ್ಮುರು: ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿರುವ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಇಲ್ಲಿನ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಸೋಮವಾರ ಮನವಿ ಸಲ್ಲಿಸಿರುವ ರೈತ ಸಂಘ, ರಾಜ್ಯದಲ್ಲಿ ರಾಜಕೀಯದಲ್ಲಿ ಪ್ರಬಲರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಶಕ್ತಿಯನ್ನು ಬಳಸಿಕೊಂಡು ನೂರಾರು ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಖಂಡನೀಯ. ಅಮಾಯಕ ಹೆಣ್ಣು ಮಕ್ಕಳನ್ನು ಹೆದರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವುದು ರಾಜ್ಯಕ್ಕೆ ಅವಮಾನ ಎಸಗಿಸಿದ್ದಾರೆ ಎಂದಿದ್ದಾರೆ. ದೇಶದ ಪ್ರಧಾನಿಯಾಗಿದ್ದ ದೇವೇಗೌಡರ ಕುಟುಂಬದಲ್ಲಿ ಇಂತಹ ಘಟನೆ ನಡೆದಿರುವುದು ದೇಶವೇ ತಲೆ ತಗ್ಗಿಸುವಂತಾಗಿದೆ. ದೌರ್ಜನ್ಯಕ್ಕೆ ಒಳಗಾಗಿರುವ ಅನೇಕರು ಜೀವ ಭಯದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದ್ದಾರೆ.ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವಿರಾರು ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಅವರ ಬದುಕನ್ನು ಹಾಳು ಮಾಡಿರುವ ಪ್ರಜ್ವಲ್ ಹಾಗೂ ಎಚ್.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಸಾಕ್ಷ ನಾಶ ಮಾಡುವ ಸಂಭವವಿದ್ದು ಕಾರಾಗೃಹದಲ್ಲಿಯೇ ಅವರ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ, ತಾಲೂಕು ಅಧ್ಯಕ್ಷ ಮಂಜುನಾಥ, ಪ್ರಾಂತ್ಯ ರೈತ ಸಂಘದ ಉಪಾಧ್ಯಕ್ಷ ದಾನಸೂರ ನಾಯಕ, ತಿಪ್ಪೀರನ ಹಟ್ಟಿ ಚಂದ್ರಣ್ಣ, ಕನಕ ಶಿವಮೂರ್ತಿ, ಕುರಾಕಲ ಹಟ್ಟಿ ನಾಗರಾಜ, ಗೌತಮ್, ಕೆ.ಟಿ.ನಾಗರಾಜ, ರವಿ, ನಾಗರಾಜ, ತಿಪ್ಪೇಸ್ವಾಮಿ ಇದ್ದರು.