ನಾಡದ್ರೋಹಿ ಎಂಇಎಸ್‌, ಶಿವಸೇನೆ ನಿಷೇಧಕ್ಕೆ ಆಗ್ರಹ

| Published : Mar 11 2025, 12:47 AM IST

ಸಾರಾಂಶ

ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಎಂಇಎಸ್‌, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಎಂಇಎಸ್‌, ಶಿವಸೇನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡೆತಡೆ ಉಂಟಾಗಿ, ಸವಾರರು ತೀವ್ರ ಪರದಾಡುವಂತಾಯಿತು. ಗಡಿಭಾಗದಲ್ಲಿ ಪದೇ ಪದೆ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿರುವ ನಾಡದ್ರೋಹಿ ಎಂಇಎಸ್‌ ಮತ್ತು ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಜತೆಗೆ ಎಂಇಎಸ್‌ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್ ಅ‍ವರು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿನ ಮರಾಠಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಯ ರಕ್ಷಣೆ ಮಾಡಬೇಕು, ಎಂಇಎಸ್ ನಿಷೇಧಿಸಬೇಕು, ಮಹದಾಯಿ ಯೋಜನೆ ಅನುಷ್ಠಾನಗೊಳಿಸುವುದು ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ಮಾ.22ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿಲ್ಲ. ಶೀಘ್ರವೇ ಎಂಇಎಸ್ ನಿಷೇಧ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸುವರ್ಣ ವಿಧಾನಸೌಧಕ್ಕೆ ತಿಂಗಳಿಗೆ ಮೂವರು ಮಂತ್ರಿಗಳು ಬಂದು,‌ ಜನರ ಸಮಸ್ಯೆ ಆಲಿಸಬೇಕು. ಬೆಳಗಾವಿಯ ರಾಜಕಾರಣಿಗಳು ಮತಕ್ಕಾಗಿ ಮರಾಠಿಗರ ಓಲೈಕೆ ಮಾಡಬಾರದು. ಬೇಕಿದ್ದರೆ ಅವರೂ ಮಹಾರಾಷ್ಟ್ರಕ್ಕೆ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾ.ರಾ.ಗೋವಿಂದು ಮಾತನಾಡಿ, ಮರಾಠಿಗರ ಪರ ನಿಲುವು ಹೊಂದಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕೇ ಹೊರತು ಅನ್ಯ ಭಾಷೆಗೆ ಆದ್ಯತೆ ನೀಡುವ ಅವಶ್ಯಕತೆ ಇಲ್ಲ ಎಂಬುದನ್ನು ಜಿಲ್ಲಾಧಿಕಾರಿ ಅರಿವು ಹೊಂದಬೇಕು. ಕನ್ನಡ ಪರವಾಗಿ ಕೆಲಸ ಮಾಡಬೇಕು. ಬೆಳಗಾವಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಮಹಾಂತೇಶ ರಣಗಟ್ಟಿಮಠ, ಕಸ್ತೂರಿ ಭಾವಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಪ್ರತಿಭಟನೆ ಒಕೆ, ರಸ್ತೆ ಬಂದ್‌ ಏಕೆ?:

ಬೆಳಗಾವಿ: ನಗರದಲ್ಲಿನ ಪ್ರಮುಖ ಚನ್ನಮ್ಮ ವೃತ್ತದಲ್ಲಿ ಮತ್ತೆ ಒಂದೇ ದಿನದಲ್ಲಿ ಹಲವು ಪ್ರತಿಭಟನೆಗಳು ನಡೆದಿವೆ. ಇದರಿಂದಾಗಿ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು, ಚಿಕಿತ್ಸೆಗೆ ಬರುವ ರೋಗಿಗಳು ಹಾಗೂ ವಯೋವೃದ್ಧರು ತೊಂದರೆಗೆ ಒಳಗಾಗುತ್ತಿದ್ದಾರೆ.

ಪ್ರತಿಭಟನೆ ಮಾಡುವ ಹಕ್ಕು ಪ್ರಜಾಪ್ರಭುತ್ವದ ಅಂಗವಾದರೂ, ರಸ್ತೆ ಬಂದ್‌ ಮಾಡುವುದು ಸಾರ್ವಜನಿಕ ಜೀವನಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದೆ. ಈ ಅವ್ಯಾಹತ ಸಂಚಾರ ತೊಂದರೆಯಿಂದ ಆಸ್ಪತ್ರೆಗೆ ಬರುವ ರೋಗಿಗಳು ಸಮಯಕ್ಕೆ ತಲುಪುವಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ, ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಸಹ ಇದು ತೊಂದರೆಯಾಗಿದೆ. ಜಿಲ್ಲಾ ಆಡಳಿತದಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.