ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅಪಘಾತಗಳಿಗೆ ಕಾರಣವಾದ ಲಾರಿಗಳ ಮಾಲೀಕರು ಹಾಗೂ ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು

ಬಳ್ಳಾರಿ: ನಗರದಲ್ಲಿ ಲಾರಿಗಳ ಸಂಚಾರ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ನಗರದ ಎಪಿಎಂಸಿ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ನೂರಾರು ಸಾರ್ವಜನಿಕರು ಎಪಿಎಂಸಿ ವೃತ್ತದಲ್ಲಿ ಜಮಾಯಿಸಿ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.

ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅಪಘಾತಗಳಿಗೆ ಕಾರಣವಾದ ಲಾರಿಗಳ ಮಾಲೀಕರು ಹಾಗೂ ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಹಾಗೂ ಮಾಜಿ ಶಾಸಕ ಸೋಮಶೇಖರ ರೆಡ್ಡಿ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ಕಳೆದ ಎರಡು ದಿನಗಳಲ್ಲಿ ಗುಗ್ಗರಹಟ್ಟಿ, ಈದ್ಗಾ ಮೈದಾನ ಹಾಗೂ ರೇಡಿಯೋ ಪಾರ್ಕ್ ಬಳಿ ಲಾರಿಗಳಿಂದ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಇದರಿಂದ ಮೂರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಬಳ್ಳಾರಿ ನಗರದೊಳಗೆ ಟಿಪ್ಪರ್ ಲಾರಿಗಳ ಸಂಚಾರಕ್ಕೆ ನಿಷೇಧವಿದ್ದರೂ ನಿರ್ಬಂಧ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಲಾರಿಗಳ ಅತಿವೇಗ ಹಾಗೂ ನಿಯಂತ್ರಣವಿಲ್ಲದ ಸಂಚಾರದಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಲಾರಿ ಡಿಕ್ಕಿಯಾಗಿ ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಸಾವುಗಳಿಗೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ಅಕ್ರಮ ಅದಿರು, ಗ್ರಾವೆಲ್ ಹಾಗೂ ಮರಳು ಸಾಗಣೆದಾರರ ಅನುಕೂಲಕ್ಕಾಗಿ ನಗರದಲ್ಲಿ ಟಿಪ್ಪರ್ ಲಾರಿಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಸರಣಿ ಅಪಘಾತ ಸಂಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಕೂಡಲೇ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ನಗರ ಪ್ರವೇಶಿಸುವ ಲಾರಿಗಳ ಸಂಚಾರ ಸಂಪೂರ್ಣವಾಗಿ ನಿಷೇಧಿಸಬೇಕು. ಅಪಘಾತಕ್ಕೆ ಕಾರಣವಾದ ಲಾರಿ ಯಾರಿಗೆ ಸೇರಿವೆ ಎಂಬುದನ್ನು ಪತ್ತೆಹಚ್ಚಿ ಮಾಲೀಕರು ಹಾಗೂ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಸಂಚಾರ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಗೋವಿಂದರಾಜು ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಪ್ರಯತ್ನಿಸಿದರು. ರಸ್ತೆ ತಡೆಯಿಂದ ಎಪಿಎಂಸಿ ವೃತ್ತದ ಸುತ್ತಮುತ್ತ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು.

ನಗರದಲ್ಲಿ ಕಳೆದ ಮೂರು ದಿನಗಳಲ್ಲಿ ಲಾರಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆಗಳು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆಗೆ ಮುಂದಾದರು.