ಬಳ್ಳಾರಿ: ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಕಿರುಕುಳ ಸೇರಿದಂತೆ ಗಂಭೀರ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಲೇಜಿನ ಮಾನ್ಯತೆ ರದ್ದುಪಡಿಸಿ, ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಶಿಕ್ಷಣ ಸಂಸ್ಥೆಗಳ ಪ್ರಮುಖ ಜವಾಬ್ದಾರಿ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವುದಾಗಿದೆ. ಆದರೆ, ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ ಪದೇಪದೇ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಇತರೆ ಗಂಭೀರ ಆರೋಪಗಳು ಕೇಳಿಬರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಘಟನೆಗಳು ಕಾಲೇಜಿನ ಆಡಳಿತ ಮಂಡಳಿಯ ವೈಫಲ್ಯವನ್ನು ಬಯಲಿಗೆಳೆಯುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿರುವುದರಿಂದ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಗಳ ಮೂಲವನ್ನು ಪತ್ತೆ ಹಚ್ಚಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಕಾಲೇಜಿನ ಮಾನ್ಯತೆ ರದ್ದುಪಡಿಸುವ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಈ ಗಂಭೀರ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸದೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸದಿದ್ದರೆ ಬಳ್ಳಾರಿ ನಗರದಲ್ಲಿ ವ್ಯಾಪಕ ಪ್ರತಿಭಟನೆ, ಕಾಲೇಜು ಬಂದ್ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಬಿವಿಪಿ ಮುಖಂಡರು ಎಚ್ಚರಿಕೆ ನೀಡಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ. ಭರತ್ ಹಂಪಾಪಟ್ಟಣ, ವಿಭಾಗ ಸಂಚಾಲಕ ಕೆ. ದಿಲೀಪಕುಮಾರ್, ಕಾರ್ಯಕರ್ತರಾದ ದರ್ಶನ್, ಮಾರುತಿ, ಪೂಜಾರಿ ಭವಾನಿ, ಸಾಗರ್, ರಘು, ರೂಪಾಲಿ, ಹರಿ, ಹರ್ಷಿತ್ ರೆಡ್ಡಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಗಡಗಿಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನಾ ಸಮಾವೇಶ ನಡೆಸಿ, ಪ್ಯೂಪಿಲ್ ಟ್ರೀ ಕಾಲೇಜು ಮಾನ್ಯತೆ ರದ್ದತಿಗೆ ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತ ಕಚೇರಿಗೆ ಆಗಮಿಸಿ ಕೇಂದ್ರ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.