ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕವನ್ನು ನಿವಾರಿಸಬೇಕು.

ಬಳ್ಳಾರಿ: ದೇಶದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸುತ್ತಿರುವ ಕೋಚಿಂಗ್ ಮಾಫಿಯಾಗೆ ಕೂಡಲೇ ಕಡಿವಾಣ ಹಾಕಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಬಳ್ಳಾರಿಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಗರದ ಒಪಿಡಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕವನ್ನು ನಿವಾರಿಸಬೇಕು. ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕ, ವಿಶ್ವಾಸಾರ್ಹವಾಗಿಸುವ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಮಾಜಿ ರಾಜ್ಯಾಧ್ಯಕ್ಷ ಡಾ. ಪ್ರಮೋದ್ ನಿಟ್ಟೂರ್ ಮಾತನಾಡಿ, ದೇಶದ ಶಿಕ್ಷಣ ವ್ಯವಸ್ಥೆಯ ಮೇಲೆ ಕೋಚಿಂಗ್ ಸಂಸ್ಥೆಗಳ ಹಿಡಿತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಾಮಾನ್ಯ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗಿ ಕೋಚಿಂಗ್ ಸಂಸ್ಥೆಗಳಿಗೆ ಪರೋಕ್ಷವಾಗಿ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ಶಿಕ್ಷಣವು ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ದುಬಾರಿಯಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕಾದರೆ ಕೋಚಿಂಗ್ ಮಾಫಿಯಾಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದ್ದು, ಇಂತಹ ಗಂಭೀರ ಪ್ರಕರಣಗಳು ಮರುಕಳಿಸದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ತಮ್ಮ ಭವಿಷ್ಯದ ರಕ್ಷಣೆಗಾಗಿ ಹೋರಾಟ ನಡೆಸಿದ ವಿದ್ಯಾರ್ಥಿಗಳನ್ನು ಅಪರಾಧಿಗಳಂತೆ ಕಾಣುವುದು ಸರಿಯಲ್ಲ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಎನ್‌ಟಿಎ ಕೋಚಿಂಗ್ ಮಾಫಿಯಾಗಳ ಪ್ರಭಾವಕ್ಕೆ ಒಳಗಾಗಿರುವಂತಿದೆ. ಶಿಕ್ಷಣ ಕ್ಷೇತ್ರದ ಖಾಸಗೀಕರಣವನ್ನು ಉತ್ತೇಜಿಸುವ ರೀತಿಯ ನೀತಿಗಳಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಮಹತ್ವ ಕುಗ್ಗುತ್ತಿದೆ. ಇದರ ಪರಿಣಾಮವಾಗಿ ಶಿಕ್ಷಣವು ಸಾಮಾಜಿಕ ನ್ಯಾಯದ ಹಾದಿಯಿಂದ ದೂರ ಸಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ನೀತಿಗಳು ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆ ಹೆಚ್ಚಿಸುತ್ತಿವೆ. ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವ ಬದಲು ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯ, ಶಿಕ್ಷಕರು ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ ಅವರು ಒತ್ತಾಯಿಸಿದರು.

ಕಾರ್ಯದರ್ಶಿ ನಿಹರಿಕಾ ಆರ್., ಜಿಲ್ಲಾ ಪ್ರಮುಖರಾದ ಕಾಂತೇಶ್, ತಿಪ್ಪೇಸ್ವಾಮಿ, ಶಶಿಧರ್, ಸುಧಾಕರ್ , ಸುಶೀಲ ಕುಮಾರ್ ಪಾಟೀಲ್, ರಾಹುಲ್ ರಾಥೋಡ್, ಪೃಥ್ವಿರಾಜ್ ರಾಠಿ, ವಿನಯ್ ಕುಮಾರ್ ಎನ್., ಶ್ರೇಯಾ ಎನ್.ಎಸ್. ಸೇರಿದಂತೆ ಬಳ್ಳಾರಿ ಮೆಡಿಕಲ್ ಕಾಲೇಜಿನ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.