ಅಣಬೆಗಳಂತೆ ಖಾಸಗಿ ಶಾಲೆಗಳು ತಲೆ ಎತ್ತುತ್ತಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ.

ಕೊಪ್ಪಳ: ಡೊನೇಷನ್ ಹಾವಳಿಗೆ ಕಡಿವಾಣ ಹಾಕುವಂತೆ ಮತ್ತು ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಮುಖಂಡರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿರುವ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆ ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಅಣಬೆಗಳಂತೆ ಖಾಸಗಿ ಶಾಲೆಗಳು ತಲೆ ಎತ್ತುತ್ತಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈಗಾಗಲೆ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೊನೇಷನ್ ಹಣ ಮನಬಂದಂತೆ ವಸೂಲಿ ಮಾಡಲು ಮುಂದಾಗಿದ್ದಾರೆ. ಬಡ ಹಿಂದುಳಿದ, ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ಅಸಾಧ್ಯವಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್.ಟಿ.ಇ ಕಾಯ್ದೆ ಜಾರಿಯಾದರೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ.

ಡೊನೇಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ ( ಡೊನೇಷನ್ ವಿರೋಧಿ ಸಮಿತಿ) ತಕ್ಷಣ ರಚಿಸಬೇಕು.ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆ ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆ ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರ ಮಾಧ್ಯಮಗಳ ಮೂಲಕ ಮತ್ತು ಭಿತ್ತಿ ಪತ್ರ. ಕರಪತ್ರಗಳ ಮೂಲಕ ಪ್ರಚಾರ ಪಡಿಸಬೇಕು.ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಡೊನೇಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್‌ ಪ್ರಾಧಿಕಾರ ರಚನೆ ಕುರಿತು 15 ದಿನಗಳ ಒಳಗಾಗಿ ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು. ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿಸಭೆ ಕರೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸಿದ ಶುಲ್ಕದ ವಿವರಗಳನ್ನು ಶಾಲಾ- ಕಾಲೇಜುಗಳ ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸಬೇಕು. ನಿಯಮ ಮೀರಿ ಡೊನೇಷನ್ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ದಂಡ ಮತ್ತು ಶಿಕ್ಷೆಗೊಳಪಡಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿ ಮುಖಂಡರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ, ಜಿಲ್ಲಾ ಮುಖಂಡ ಯಮನೂರ, ಸಮೀರ್. ನಾಗರಾಜ್, ಮೌನೇಶ್, ವೆಂಕಟೇಶ್. ದೇವರಾಜ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.