ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಆಗ್ರಹ

| Published : May 03 2024, 01:02 AM IST

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣ ಕಾಮಗಾರಿ ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತಕ್ಕೆ ಒತ್ತಾಯ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣ ಕಾಮಗಾರಿ ತಡೆಗಟ್ಟುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ ಅವರನ್ನು ಗುರುವಾರ ಭೇಟಿ ಮಾಡಿದ ಸಂಘಟನೆ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.ಕಡೂರು ತಾಲೂಕಿನ ನಾಗೋಡನಹಳ್ಳಿ ಕೆರೆ, ದೋಗಿಹಳ್ಳಿ ಕೆರೆ ಮತ್ತು ಕೆ. ಚಟ್ಟನಹಳ್ಳಿ ಕೆರೆಯಲ್ಲಿ ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಅಲ್ಲಿನ ಸಂಪನ್ಮೂಲ ನಾಶ ವಾಗುತ್ತಿರುವ ಜೊತೆಗೆ ದಟ್ಟ ಧೂಳಿನಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿದರು.ನೂತನವಾಗಿ ನಿರ್ಮಿಸುತ್ತಿರುವ ಕಡೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ಪ್ರತಿದಿನ ಅಪಘಾತಗಳಾಗುತ್ತಿದ್ದು ಇದುವರೆಗೆ ಹತ್ತು ಜನ ಸಾವನ್ನಪ್ಪಿದ್ದಾರೆ ಎಂದು ದೂರಿದರು.ತಂಗಲಿ ಗ್ರಾಮದ ಬಳಿ ನಿರ್ಮಿಸಿರುವ ಬಸ್ ನಿಲ್ದಾಣ ಸೇರಿದಂತೆ ಅವೈಜ್ಞಾನಿಕವಾಗಿ ಕಟ್ಟಲಾಗಿರುವ ಬಸ್ ನಿಲ್ದಾಣಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.ಅಕ್ರಮ ಗಣಿಗಾರಿಕೆ ತಡೆಗಟ್ಟುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪದಾಧಿಕಾರಿಗಳು ಅಕ್ರಮ ಗಣಿಗಾರಿಕೆ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮನವಿಗೆ ಸ್ಪಂದಿಸದಿದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ರಾಜ್ಯಾಧ್ಯಕ್ಷ ಸೋಮು ನಾಯಕ್, ಕಡೂರು ತಾಲೂಕು ಅಧ್ಯಕ್ಷ ವಿನಯ್ ಬಾಬು, ಸಂಘಟನಾ ಕಾರ್ಯದರ್ಶಿ ಸೋನಿ ಕೋಡಿಹಳ್ಳಿ, ತಾಲೂಕು ಉಪಾಧ್ಯಕ್ಷ ಜಿ. ಸುಧೀನ್‌ಕುಮಾರ್ ಹಾಜರಿದ್ದರು.

2 ಕೆಸಿಕೆಎಂ 1ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣ ಕಾಮಗಾರಿ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರೆಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.