ಸಾರಾಂಶ
ಹಿರಿಯೂರು ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಹಿರಿಯೂರು
ಹಿರಿಯೂರು ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನಾದ್ಯಂತ ಮುಂಗಾರು ಮಳೆ ವೈಫಲ್ಯದಿಂದ ಕೊಳವೆಬಾವಿಗಳು ಬತ್ತಿ ಹೋಗಿದ್ದು, ಅಂತರ್ಜಲ ಪಾತಾಳ ಸೇರಿದೆ. ಸಕಾಲದಲ್ಲಿ ಮಳೆಯಾಗದೆ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಶೇಂಗಾ, ಸೂರ್ಯಕಾಂತಿ, ಜೋಳ, ನವಣೆ, ಸಜ್ಜೆ ಮುಂತಾದ ಅಲ್ಪಾವಧಿ ಬೆಳೆಗಳು ಹಾಗೂ ತೆಂಗು, ಅಡಿಕೆ,ದಾಳಿಂಬೆ, ಪಪ್ಪಾಯಿ ಮುಂತಾದ ಬೆಳೆಗಳು ಒಣಗಿ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಾಗಾಗಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮುಖಾಂತರ ರೈತರು ಬೆಳೆ ವಿಮೆ ಪಾವತಿಸಿದ್ದು, ವಿಮೆ ಪಾವತಿಸಿರುವ ಎಲ್ಲಾ ರೈತರಿಗೂ ಲಾಭದಾಯಕ ಬೆಳೆ ಪರಿಹಾರ ಒದಗಿಸಬೇಕು ಎಂದು ರೈತ ಸಂಘದ ಕಾರ್ಯಕರ್ತರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ ಹೊರಕೇರಪ್ಪ, ತಾಲೂಕು ಅಧ್ಯಕ್ಷ ಬಿಓ. ಶಿವಕುಮಾರ್, ಯುವ ಘಟಕದ ಅಧ್ಯಕ್ಷ ಚೇತನ್ ಯಳನಾಡು, ದಸ್ತಗೀರ್ ಸಾಬ್, ನಿತ್ಯಶ್ರೀ, ಎಂಆರ್. ಪುಟ್ಟಸ್ವಾಮಿ, ಉಮಾಪತಿ, ಚಿಕ್ಕ ತಿಮ್ಮಯ್ಯ, ಪೀರ್ ಸಾಬ್, ದಾದಾಪೀರ್, ನಾಗರಾಜ್, ಖಲೀಲ್ ಮುಂತಾದವರು ಹಾಜರಿದ್ದರು.