ಹೊಸಪೇಟೆ: ಈ ವರ್ಷ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ವ್ಯಾಪಕ ಬರಗಾಲ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕಾರ್ತಿಕ್ ಬಣ) ಜಿಲ್ಲಾ ಘಟಕ ಒತ್ತಾಯಿಸಿದೆ.
ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜೆ.ಉಮಾದೇವಿ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿಗೆ ಒಳಗಾಗಿ ಎರಡನೇ ಬೆಳೆಗೆ ನೀರು ನೀಡದಿರುವುದು ಮತ್ತು ಜಿಲ್ಲೆಯಲ್ಲಿ ಈಗಾಗಲೇ ಬಿತ್ತನೆ ಮಾಡಿರುವ ಮೆಕ್ಕೆಜೋಳ, ಸೂರ್ಯಕಾಂತಿ, ಬಾಳೆ ಮತ್ತು ಕಬ್ಬು ಬೆಳೆ ಒಣಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೂಡಲೇ ಬರಗಾಲ ಪೀಡಿತ ಜಿಲ್ಲೆಯನ್ನು ಘೋಷಣೆ ಮಾಡಬೇಕು. ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಗಳು, ರಾಷ್ಟ್ರೀಕೃತ ಗ್ರಾಮೀಣ ಬ್ಯಾಂಕುಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಅವರು ಒತ್ತಾಯಿಸಿದರು.ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಕಾಳಿದಾಸ ಮಾತನಾಡಿ, ರಾಜ್ಯ ಸರ್ಕಾರ ಜುಲೈ 21ರೊಳಗೆ ವಿಜಯನಗರ ಜಿಲ್ಲೆಯನ್ನು ಬರಗಾಲ ಜಿಲ್ಲೆಯೆಂದು ಘೋಷಣೆ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಹೇಮಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ರುದ್ರಪ್ಪ, ಮುಖಂಡರಾದ ಮಾಲತೇಶ, ಮುತ್ತಯ್ಯ, ಅಂಕೇಶ ಸೇರಿದಂತೆ ಅನೇಕ ರೈತರು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.