ವಿಜಯನಗರ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಒತ್ತಾಯಿಸಿದೆ.
ಹೊಸಪೇಟೆ: ವಿಜಯನಗರ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಒತ್ತಾಯಿಸಿದೆ.
ರಾಜ್ಯ ಉಪಾಧ್ಯಕ್ಷ ಕೆ. ಪರಶುರಾಮ್ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ತಕ್ಷಣವೇ ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಬೆಳೆನಷ್ಟದ ಜಂಟಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯ ಕಾರ್ಯದರ್ಶಿ ದೇವರಮನೆ ಮಹೇಶ್ ಮಾತನಾಡಿ, ರೈತರು ಕೃಷಿಗಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟದಲ್ಲಿದ್ದು, ಕೃಷಿ ಕಾರ್ಮಿಕರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬದುಕು ಉಳಿಸಲು ಸರ್ಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಬಣಕಾರ ಬಸವರಾಜ್ ಮಾತನಾಡಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಹೂವಿನಹಡಗಲಿ, ಕೊಟ್ಟೂರು ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಮೆಕ್ಕೆಜೋಳ, ಜೋಳ, ತೊಗರಿ, ಹೆಸರು, ಎಳ್ಳು ಹಾಗೂ ಹತ್ತಿ ಬೆಳೆಗಳಿಗೆ ಸೂಕ್ತ ಬೆಳೆನಷ್ಟ ಪರಿಹಾರ ನೀಡಬೇಕು. ಜತೆಗೆ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ, ನಿರಂತರ ವಿದ್ಯುತ್, ಗುಣಮಟ್ಟದ ಬಿತ್ತನೆ ಬೀಜ ಮತ್ತು ಗೊಬ್ಬರ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ, ಗೋಶಾಲೆ ಹಾಗೂ ಮೇವು ಬ್ಯಾಂಕ್ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಉಪಾಧ್ಯಕ್ಷ ಬೂದಿ ನಾಗರಾಜ್, ಹಗರಿಬೊಮ್ಮನಹಳ್ಳಿ ತಾಲೂಕು ಅಧ್ಯಕ್ಷ ಶೀಗೆನಹಳ್ಳಿ ಬಸವರಾಜ್, ಮರಿಯಮ್ಮನಹಳ್ಳಿ ಹೋಬಳಿ ಅಧ್ಯಕ್ಷ ಸಂಪತ್, ಹೊಸಪೇಟೆ ತಾಲೂಕು ಅಧ್ಯಕ್ಷ ಬಿ. ಶೇಕಪ್ಪ, ಬಿ. ಸ್ವಾಮಿ ಹಾಗೂ ರೈತಪರ ಹೋರಾಟಗಾರ ಬಿ. ಕುಬೇರ. ಗ್ರಾಮ ಘಟಕ ಅಧ್ಯಕ್ಷ ಪಿ. ನಾಗಪ್ಪ, ವರದಾಪುರದ ಯಮನೂರ ಸೋಮು ತಳವಾರ್, ಎಚ್. ಹಾಲೇಶ್. ದೊಡ್ಡ ಬಸವರಾಜ್, ಕುಮಾರ್ ಉಪಸ್ಥಿತರಿದ್ದರು.